ಬೆಂಗಳೂರು : ‘ವೆಜ್, ಚಿಕನ್, ಫಿಶ್ ಸೇರಿ ಇತರೆ ಕಬಾಬ್‍ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸಬಾರದು’ ಎಂದು ಆರೋಗ್ಯ ಇಲಾಖೆಯು ಸೋಮವಾರ ಆದೇಶ ಹೊರಡಿಸಿದೆ.
ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಕಬಾಬ್ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯ ವರೆಗೆ ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷ ರೂ.ಗಳ ವರೆಗೆ ದಂಡವನ್ನು ವಿಧಿಸಲಾಗುತ್ತದೆ.
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‍ನ ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಿಂದ ಕೂಡಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‍ನ 39 ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ಸನ್‍ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಕೃತಕ ಬಣ್ಣಗಳು ಅಸುರಕ್ಷಿತವಾಗಿರುತ್ತವೆ ಎಂದು ಫಲಿತಾಂಶ ಬಂದಿದೆ ಎಂದು ಪ್ರಕಟನೆ ತಿಳಿಸಿದೆ.