ಬೆಂಗಳೂರು:
ಚಿಕ್ಕಮಗಳೂರು ಜಿಲ್ಲೆಯ ಗುರುದತ್ತಾತ್ರೇಯ ಬಾಬಾ ಬುಡನ್ ದರ್ಗಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಿರುವ ಎಸ್.ಎಲ್.ಪಿ(ಸಿವಿಲ್)ಗೆ ಆಕ್ಷೇಪಣಾ ಹೇಳಿಕೆಯನ್ನು ತಯಾರಿಸುವ ಕುರಿತು ಸೂಕ್ತ ಶಿಫಾರಸುಗಳನ್ನು ಮಾಡಲು ಐವರು ಸಚಿವರ ಸಂಪುಟ ಉಪ ಸಮಿತಿ ರಚಿಸಲು ನಿರ್ಧರಿಸಲಾಗಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಈ ವಿಷಯವನ್ನು ತಿಳಿಸಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಂಪುಟ ಉಪ ಸಮಿತಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರನ್ನು ಸದಸ್ಯರನ್ನಾಗಿ ಮುಖ್ಯಮಂತ್ರಿ ನೇಮಿಸಿದ್ದಾರೆ ಎಂದು ಅವರು ಹೇಳಿದರು.