ಹವಾಮಾನ ವೈಪರೀತ್ಯದಿಂದ ದೆಹಲಿ ಬದಲು ಜೈಪುರದಲ್ಲಿ ಸಿದ್ದರಾಮಯ್ಯ ವಿಶೇಷ ವಿಮಾನ ಲ್ಯಾಂಡ್
ಬೆಂಗಳೂರು, ಮೇ 28: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದೆಹಲಿಗೆ ತೆರಳುತ್ತಿದ್ದ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ದೆಹಲಿ ಬದಲು ಜೈಪುರದಲ್ಲಿ ಇಳಿದಿದೆ.
ದೆಹಲಿ ಭಾಗದಲ್ಲಿ ಉಂಟಾದ ಹವಾಮಾನ ಅಡಚಣೆಯಿಂದ ವಿಮಾನ ಲ್ಯಾಂಡ್ ಮಾಡಲು ಸಾಧ್ಯವಾಗದೇ ಮುನ್ನೆಚ್ಚರಿಕಾ ಕ್ರಮವಾಗಿ ಜೈಪುರಕ್ಕೆ ತಿರುಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಹವಾಮಾನ ವೈಪರೀತ್ಯದಿಂದ ವಿಶೇಷ ವಿಮಾನ ಜೈಪುರದಲ್ಲಿ ಇಳಿದ ಬಳಿಕ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಜೈಪುರ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ನಂತರ ಕರ್ನಾಟಕ ರಾಜಕೀಯದಲ್ಲಿ ವೇಗವಾಗಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಈ ಭೇಟಿ ಗಮನ ಸೆಳೆದಿದೆ.
ಸಿದ್ದರಾಮಯ್ಯ ಅವರೊಂದಿಗೆ ಹಲವು ಕಾಂಗ್ರೆಸ್ ನಾಯಕರು ಹಾಗೂ ಆಪ್ತರು ಕೂಡ ವಿಶೇಷ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.
ವಿಮಾನದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಇದ್ದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಲು ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ರಾಜೀನಾಮೆಯ ನಂತರ ಕರ್ನಾಟಕ ರಾಜಕೀಯದಲ್ಲಿ ಬೆಳವಣಿಗೆಗಳು ವೇಗ ಪಡೆದಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕ ಆಯ್ಕೆ ಪ್ರಕ್ರಿಯೆ ಮುಂದುವರಿದಿದೆ.
