ಭಾನುವಾರ ನಡೆದ ಪರಿಶೀಲನೆಯ ವೇಳೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಅಧಿಕಾರಿಗಳು. ಚಿತ್ರ: ಬೆಂಗಳೂರು ಕೇಂದ್ರ ನಗರ ಪಾಲಿಕೆ
ಬೆಂಗಳೂರು: ವಾರ್ಡ್ ಒನ್ ಅಭಿಯಾನ, ಸ್ವಚ್ಛತೆ, ಪಾದಚಾರಿ ಮಾರ್ಗ ದುರಸ್ತಿ, ಸಾರ್ವಜನಿಕ ಮೂಲಸೌಕರ್ಯ ಸುಧಾರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತ ವೆಂಕಟಾಚಲಪತಿ ಅವರು ಭಾನುವಾರ ಬನ್ನಪ್ಪ ಪಾರ್ಕ್, ಮೈಸೂರು ಬ್ಯಾಂಕ್ ವೃತ್ತ, ಚಾಮರಾಜಪೇಟೆ ವಿಭಾಗದ ವಿವಿಧ ಪ್ರದೇಶಗಳು ಹಾಗೂ ಓಕಳೀಪುರಂ ಅಷ್ಟಪಥ ಕಾರಿಡಾರ್ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ನವೆಂಬರ್ 22ರಂದು ಹೊರಡಿಸಿದ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ, ಸ್ವಚ್ಛ ಪರಿಸರ ಮತ್ತು ಉತ್ತಮ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹಾಗೂ ನಿರ್ವಹಣೆಯಲ್ಲಿ ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆ.ಆರ್. ರಸ್ತೆಯ ಬನ್ನಪ್ಪ ಪಾರ್ಕ್‌ಗೆ ಭೇಟಿ ನೀಡಿದ ಅವರು, ಉದ್ಯಾನವನವನ್ನು ಸ್ವಚ್ಛವಾಗಿ ಹಾಗೂ ಸುಂದರವಾಗಿ ನಿರ್ವಹಿಸಬೇಕು, ಸಾರ್ವಜನಿಕರು ಆಹ್ಲಾದಕರ ವಾತಾವರಣದಲ್ಲಿ ಸಮಯ ಕಳೆಯಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು, ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಂಡು ಉದ್ಯಾನವನದ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ನಂತರ ಬನ್ನಪ್ಪ ಪಾರ್ಕ್‌ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಕಾಲ್ನಡಿಗೆಯಲ್ಲಿ ತೆರಳಿ ಪರಿಶೀಲನೆ ನಡೆಸಿದ ಅವರು, ಹಾಳಾಗಿರುವ ಪಾದಚಾರಿ ಮಾರ್ಗಗಳನ್ನು ತ್ವರಿತವಾಗಿ ದುರಸ್ತಿಗೊಳಿಸಬೇಕು ಹಾಗೂ ರಸ್ತೆ ಬದಿಯಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಅಗತ್ಯವಿರುವ ಸ್ಥಳಗಳಲ್ಲಿ ‘ಮೂತ್ರ ವಿಸರ್ಜನೆ ನಿಷೇಧ’, ‘ಕಸ ಎಸೆಯುವುದು ನಿಷೇಧ’ ಸೇರಿದಂತೆ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸಬೇಕು ಮತ್ತು ಅಪಾಯಕಾರಿ ಹಾಗೂ ಹಾನಿಗೊಳಗಾದ ಸೂಚನಾ ಫಲಕಗಳನ್ನು ತೆರವುಗೊಳಿಸಬೇಕು ಎಂದು ಅವರು ಹೇಳಿದರು. ಮರಗಳ ಸುತ್ತಮುತ್ತ ಸುರಿದಿರುವ ಕಟ್ಟಡ ಭಗ್ನಾವಶೇಷಗಳು ಹಾಗೂ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆಯೂ ಸೂಚಿಸಿದರು.
ಚಾಮರಾಜಪೇಟೆ ವಿಭಾಗದಲ್ಲಿ ನಡೆಯುತ್ತಿರುವ ವಾರ್ಡ್ ಒನ್ ಅಭಿಯಾನದ ಸ್ಥಳಗಳಿಗೆ ಭೇಟಿ ನೀಡಿದ ಅವರು, ರಸ್ತೆ ಬದಿಯ ಮಣ್ಣು ಹಾಗೂ ತ್ಯಾಜ್ಯವನ್ನು ತೆರವುಗೊಳಿಸುವ ಸಂದರ್ಭದಲ್ಲಿ ಪಾದಚಾರಿ ಮಾರ್ಗಗಳಿಗೆ ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹೊಸಹಳ್ಳಿ ಮುಖ್ಯ ರಸ್ತೆಯನ್ನು ಸುಮಾರು 1.8 ಕಿ.ಮೀ. ಉದ್ದದಲ್ಲಿ ಅಗಲೀಕರಣಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲಿಸಿ, ಮುಂದಿನ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ನಿರ್ದೇಶನ ನೀಡಿದರು. ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಸಾರ್ವಜನಿಕರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ ನೀಡಿ, ಜನಸ್ನೇಹಿಯಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು.
ಚಾಮರಾಜಪೇಟೆ ವಿಭಾಗದ ರಾಯಪುರ ಹಾಗೂ ಜೆ.ಜೆ.ಆರ್. ನಗರದಲ್ಲಿ ಅಮೃತ ನಗರೋತ್ಥಾನ ಮತ್ತು ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದ (CMIDP) ಅನುದಾನದಡಿ ನೂತನವಾಗಿ ನಿರ್ಮಿಸಲಾಗುತ್ತಿರುವ ನಾಲ್ಕು ಅಂತಸ್ತಿನ ಎರಡು ಪಾಲಿಕೆಯ ಶಾಲಾ-ಕಾಲೇಜುಗಳ ಕಟ್ಟಡ ಕಾಮಗಾರಿಗಳಿಗೂ ಅವರು ಭೇಟಿ ನೀಡಿದರು. ಕಟ್ಟಡದ ಪ್ರತಿಯೊಂದು ಕೊಠಡಿಗೂ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದ ಅವರು, ನಿರ್ಮಾಣ ಕಾಮಗಾರಿಗಳ ಸಂದರ್ಭದಲ್ಲಿ ಕಾರ್ಮಿಕರು ಮತ್ತು ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಕಾಮಗಾರಿಗಳಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ ನಿಗದಿತ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೋರಿಪಾಳ್ಯದಲ್ಲಿರುವ ಪಾಲಿಕೆಯ ಶಾಲೆಗೆ ಭೇಟಿ ನೀಡಿದ ಅವರು, ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ ಅವರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಮಕ್ಕಳ ಸಮವಸ್ತ್ರ, ಪಠ್ಯಪುಸ್ತಕ, ಊಟೋಪಚಾರ ಹಾಗೂ ಇತರೆ ಅಗತ್ಯ ಮೂಲಸೌಕರ್ಯ ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವುದರ ಜೊತೆಗೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗಾಂಧಿನಗರ ವಿಭಾಗದ ವ್ಯಾಪ್ತಿಗೆ ಬರುವ ಓಕಳೀಪುರಂ ಅಷ್ಟಪಥ ಕಾರಿಡಾರ್ ರಸ್ತೆ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದ ಅವರು, ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ ಮತ್ತಷ್ಟು ವೇಗ ನೀಡುವಂತೆ ಸೂಚಿಸಿದರು. ತಡೆಗೋಡೆ ನಿರ್ಮಾಣದ ಬಳಿಯಿರುವ ಕಲ್ಲುಗಳನ್ನು ತೆರವುಗೊಳಿಸುವುದು ಹಾಗೂ ಮಳೆನೀರು ಚರಂಡಿಗೆ ಸಂಬಂಧಿಸಿದ ಪೈಪ್ ಪುಷಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಸಾಧ್ಯವಾದಲ್ಲಿ ಎರಡು ಬದಿಗಳಲ್ಲಿಯೂ ಏಕಕಾಲದಲ್ಲಿ ಕಾಮಗಾರಿ ಪ್ರಾರಂಭಿಸಿ ಸಂಪೂರ್ಣ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರ ವಿಜಯ್ ಕುಮಾರ್ ಹರಿದಾಸ್, ಕಾರ್ಯಪಾಲಕ ಅಭಿಯಂತರರಾದ ಜಾವೇದ್, ಭಾಸ್ಕರ್ ರೆಡ್ಡಿ, ಪ್ರದೀಪ್, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
