ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಬೆಳಿಗ್ಗೆ ನಗರ ಪಾಲಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸರ್ವಜ್ಞನಗರ ವಿಭಾಗದ ಬಾಣಸವಾಡಿ ಕೆರೆಯ ಸ್ಥಳ ಪರಿಶೀಲನೆ ನಡೆಸಿದರು.
ಪ್ರಸ್ತುತ ಈ ಕೆರೆಯು ಕಂದಾಯ ಇಲಾಖೆಯ ಅಧೀನದಲ್ಲಿದ್ದು, ಆಸ್ತಿಯನ್ನು ಸಮರ್ಪಕವಾಗಿ ಸಂರಕ್ಷಿಸುವ ಉದ್ದೇಶದಿಂದ ಅದನ್ನು ಬೆಂಗಳೂರು ಉತ್ತರ ನಗರ ಪಾಲಿಕೆಯ ವಶಕ್ಕೆ ಹಸ್ತಾಂತರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಕೆರೆಯ ಆಸ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಲಭ್ಯವಿರುವ ದಾಖಲೆಗಳು ಹಾಗೂ ನ್ಯಾಯಾಲಯದಲ್ಲಿ ದಾಖಲಾಗಿರುವ ದೂರುಗಳನ್ನು ಪರಿಶೀಲಿಸಿ ನಿಯಮಾನುಸಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶೀಲನೆ ವೇಳೆ ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್, ಕಾರ್ಯಪಾಲಕ ಅಭಿಯಂತರ ಮಹಾದೇವ್, ಸಹಾಯಕ ಕಾರ್ಯಪಾಲಕ ಅಭಿಯಂತರ ಅಕ್ಷತ್ ಸೇರಿದಂತೆ ನಗರ ಪಾಲಿಕೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
