ಚಿತ್ರದುರ್ಗ:
ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣ ಇತ್ಯರ್ಥವಾಗುವವರೆಗೆ ತಾತ್ಕಾಲಿಕ ಆಡಳಿತ ಸಮಿತಿ ರಚನೆ ಮಾಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಮಠ ಮತ್ತು ಎಸ್ಜೆಎಂ ಶಿಕ್ಷಣ ಸಂಸ್ಥೆಗಳ ದೈನಂದಿನ ವ್ಯವಹಾರಗಳ ಮೇಲ್ವಿಚಾರಣೆ ಮಾಡಲು ರಚಿಸಲಾದ ತಾತ್ಕಾಲಿಕ ಆಡಳಿತ ಸಮಿತಿಯು ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಅವರನ್ನು ಆಯ್ಕೆ ಮಾಡಿದೆ.
ಇದರಂತೆ ಸಮಿತಿಯು ನಿನ್ನೆ ಸಭೆ ನಡೆಸಿದ್ದು, ಸಭೆಯಲ್ಲಿ ಬಸವಪ್ರಭು ಸ್ವಾಮೀಜಿ ಅವರನ್ನು ಮಠದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಯಿತು. ಇದೇ ವೇಳೆ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಸಮಿತಿಯ ಕಾರ್ಯದರ್ಶಿಯನ್ನಾಗಿ ಮಾಡಲು ಕೂಡ ಸರ್ವಾನುಮತದಿಂದ ತೀರ್ಮಾನಿಸಲಾಯಿತು.