ಬೆಂಗಳೂರು:
ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಸಂಬಂಧ ಯಾವುದೇ ರೀತಿಯ ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 9 ರವರೆಗೂ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಹೊಸ ಹೆಸರು ಸೇರ್ಪಡೆಗೆ ವಿಶೇಷ ಅಭಿಯಾನ ನಡೆಸಲಾಗತ್ತಿದೆ ಎಂದು ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಹೇಳಿದ್ದಾರೆ.
ಗುರುವಾರ ಪ್ರಕಟನೆ ಹೊರಡಿಸಿರುವ ಅವರು, ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಅ.27 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಡಿ.9ರವರೆಗೂ ವಿಶೇಷ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿಯ ಎಲ್ಲ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಆಯೋಜಿಸಿದ್ದಾರೆ. ಮತದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬಹುದಾಗಿದೆ. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹಮ್ಮಿಕೊಂಡಿರುವ ವಿಶೇಷ ಅಭಿಯಾನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಕರಡು ಮತದಾರರ ಪಟ್ಟಿಯನ್ನುwww.ceokarnataka.kar.nic.in ಮತ್ತು www.bbmp.gov.in ನಲ್ಲಿ ಪರಿಶೀಲಿಸುವ ಮೂಲಕ ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು, ಮತದಾರರು ಮೊಬೈಲ್ ಆಪ್ ಅಥವಾ https://voters.eci.gov.in/ ಮೂಲಕ ಖುದ್ದಾಗಿ ನೋಂದಾಯಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿರುವ ದಿನ:
- 18.11.2023 (ಶನಿವಾರ)
- 19.11.2023 (ಭಾನುವಾರ)
- 02.12.2023 (ಶನಿವಾರ)
- 03.12.2023 (ಭಾನುವಾರ)