ಬೆಂಗಳೂರು:
“ಅಗ್ನಿ ಅನಾಹುತದಿಂದ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯ ಇಂಜಿನಿಯರ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಸೋಮವಾರ ಅವರು ಮಾತನಾಡಿದರು.
“ನಾನು ಈ ಹಿಂದೆ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯ ವಿಚಾರಿಸಲು ಭೇಟಿ ಮಾಡಿದಾಗ ಅವರ ಆರೋಗ್ಯ ಸುಧಾರಿಸುತ್ತಿರುವಂತೆ ಕಂಡಿತ್ತು. ಅವರಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು ಎಂಬ ಕಾರಣಕ್ಕೆ ಈ aಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾನು ಕೂಡ 2-3 ಬಾರಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೆ. ಇಲ್ಲಿನ ವೈದ್ಯರು ಎಲ್ಲಾ ರೀತಿಯ ಚಿಕಿತ್ಸೆ ನೀಡಿ ಅವರ ಆರೋಗ್ಯ ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತೊರ್ವ ಸಿಬ್ಬಂದಿ ಜ್ಯೋತಿ ಅವರಲ್ಲಿ ಚೇತರಿಕೆ ಕಾಣುತ್ತಿದ್ದು, ಸುಟ್ಟ ಗಾಯಗಳಿವೆ” ಎಂದು ತಿಳಿಸಿದರು.
ಅಗ್ನಿ ಅನಾಹುತದ ಬಗ್ಗೆ ತನಿಖೆ ಎಲ್ಲಿಯವರೆಗೆ ಬಂದಿದೆ ಎಂದು ಕೇಳಿದ ಪ್ರಶ್ನೆಗೆ, ‘ನಾನು ಈ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆ ವರದಿಗಳು ಬರಲಿ. ಪೊಲೀಸ್, ಬಿಬಿಎಂಪಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ಅದು ಪೂರ್ಣಗೊಳ್ಳಲಿ, ಆಮೇಲೆ ಮಾತನಾಡುತ್ತೇನೆ’ ಎಂದು ತಿಳಿಸಿದರು.