Home ಬೆಂಗಳೂರು ನಗರ BBMP including Taluk and Zilla Panchayat election process to be completed in...

BBMP including Taluk and Zilla Panchayat election process to be completed in 2 weeks: State govt assures Karnataka High Court | ಬಿಬಿಎಂಪಿ ಸೇರಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳ ಚುನಾವಣಾ ಪ್ರಕ್ರಿಯೆ 2 ವಾರಗಳಲ್ಲಿ ಪೂರ್ಣ: ರಾಜ್ಯ ಸರಕಾರ ಹೈಕೋರ್ಟ್‍ಗೆ ಭರವಸೆ

49
0
BBMP and High Court

ಬೆಂಗಳೂರು:

ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಸೇರಿ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಪ್ರಕ್ರಿಯೆಗಳನ್ನು ಮುಂದಿನ ಎರಡು ವಾರಗಳಲ್ಲಿ ಪೂರ್ಣಗೊಳಿಸುವುದಾಗಿ ರಾಜ್ಯ ಸರಕಾರ ಹೈಕೋರ್ಟ್‍ಗೆ ಭರವಸೆ ನೀಡಿದೆ.

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಸರಕಾರದ ಭರವಸೆಯನ್ನು ಪರಿಗಣಿಸಿ ಅರ್ಜಿ ಇತ್ಯರ್ಥ ಪಡಿಸಿದೆ. ಅಲ್ಲದೆ, ಚುನಾವಣಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಲ್ಲಿ ಸರಕಾರದಿಂದ ಯಾವುದಾದರೂ ಸಮಸ್ಯೆಗಳು ಎದುರಾದಲ್ಲಿ ಅರ್ಜಿದಾರರು ಅಗತ್ಯವಿದ್ದಲ್ಲಿ ಮತ್ತೆ ನ್ಯಾಯಾಲಯದ ಕದ ತಟ್ಟಬಹುದು ಎಂದು ನ್ಯಾಯಪೀಠ ತಿಳಿಸಿದೆ.

ವಿಚಾರಣೆ ವೇಳೆ ಸರಕಾರದ ಪರವಾಗಿ ಹಾಜರಾಗಿದ್ದ ರಾಜ್ಯ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಪುನವಿರ್ಂಗಡಣೆ ಪ್ರಕ್ರಿಯೆಯನ್ನು ಇಂದು(ಡಿ.19)ರಂದು ಪೂರ್ಣಗೊಳಿಸಲಾಗುತ್ತಿದ್ದು, ಅಧಿಸೂಚನೆ ಹೊರಡಿಸಲಾಗುವುದು.

ಅಲ್ಲದೆ, ಕ್ಷೇತ್ರಗಳಲ್ಲಿ ಮೀಸಲಾತಿ ನಿಗದಿಪಡಿಸುವ ಸಂಬಂಧ ಮುಂದಿನ ಎರಡು ವಾರಗಳಲ್ಲಿ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು. ಆಕ್ಷೇಪಣೆಗಳನ್ನು ಪರಿಶೀಲಿಸಿ ಮುಂದಿನ ಎರಡು ವಾರಗಳಲ್ಲಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದಾಗಿ ನ್ಯಾಯಪೀಠಕ್ಕೆ ಭರವಸೆ ನೀಡಿದರು.

ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಈ ಸಂಬಂಧ ವಿವರವಾದ ಸೂಕ್ತ ಮೆಮೋ ಸಲ್ಲಿಸುವಂತೆ ಸರಕಾರಕ್ಕೆ ಸೂಚನೆ ನೀಡಿದೆ. ಅರ್ಜಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಸಮಯಕ್ಕೆ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಸರಕಾರಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿಗಳ ದಂಡವನ್ನು ವಿಧಿಸಿತ್ತು.

ಈ ದಂಡದ ಮೊತ್ತವನ್ನು ಸರಕಾರ ಪಾವತಿ ಮಾಡಿತ್ತು. ಸ್ಥಳೀಯ ಸಂಸ್ಥೆಗಳಿಗೆ ಹಿಂದುಳಿದ ವರ್ಗಗಳು ಮತ್ತು ಎಸ್ಸಿ-ಎಸ್ಟಿ ಜನಾಂಗಕ್ಕೆ ಮೀಸಲಾತಿ ನೀಡುವ ಸಂಬಂಧ ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದು, ಈ ಸಮಿತಿ ಎಪ್ರಿಲ್ 1 ರಂದು ಮೀಸಲಾತಿ ಪಟ್ಟಿ ಸಲ್ಲಿಸಲಿದೆ. ಈ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಪೀಠಕ್ಕೆ ಸರಕಾರ ವಿವರಣೆ ನೀಡಿತ್ತು.

LEAVE A REPLY

Please enter your comment!
Please enter your name here