ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲೆ ನಡೆದ ಅಮಾನವೀಯ ದೌರ್ಜನ್ಯ ಪ್ರಕರಣದಲ್ಲಿ, ಬೆಳಗಾವಿಯ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, 12 ಆರೋಪಿಗಳನ್ನು ತಪ್ಪಿತಸ್ಥರು ಎಂದು ಘೋಷಿಸಿದೆ. ಆರೋಪಿಗಳಿಗೆ ವಿಧಿಸಬೇಕಾದ ಶಿಕ್ಷೆಯ ಪ್ರಮಾಣವನ್ನು ಬುಧವಾರ ಪ್ರಕಟಿಸಲಾಗುವುದು.
ಈ ಘಟನೆ 2023ರ ಡಿಸೆಂಬರ್ 11ರಂದು ನಡೆದಿದ್ದು, ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿಯೂ ತೀವ್ರ ಆಕ್ರೋಶ ಮತ್ತು ಚರ್ಚೆಗೆ ಕಾರಣವಾಗಿತ್ತು. ಆರೋಪಪತ್ರದ ಪ್ರಕಾರ, ಪ್ರೀತಿಸಿದ್ದ ಯುವತಿಯೊಂದಿಗೆ ಯುವಕ ಮನೆಬಿಟ್ಟು ಪರಾರಿಯಾಗಿದ್ದ ಹಿನ್ನೆಲೆಯಲ್ಲಿ ಕೋಪಗೊಂಡ ಯುವತಿಯ ಕುಟುಂಬಸ್ಥರು, ಆತನ ತಾಯಿಯನ್ನು ಸಾರ್ವಜನಿಕವಾಗಿ ಅವಮಾನಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಒಬ್ಬ ಬಾಲಾಪರಾಧಿ ಸೇರಿದಂತೆ 13 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆಯನ್ನು ನಡೆಸಿದ ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರು ಪುರುಷರು ಹಾಗೂ ಆರು ಮಹಿಳೆಯರು ಸೇರಿ 12 ಮಂದಿ ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪು ನೀಡಿದ್ದಾರೆ.
ಕಾನೂನು ಸಂಘರ್ಷಕ್ಕೆ ಒಳಗಾದ ಒಬ್ಬ ಬಾಲಾಪರಾಧಿ ಕುರಿತಂತೆ ವಿಚಾರಣೆ ಇನ್ನೂ ಮುಂದುವರಿದಿದೆ ಎಂದು ನ್ಯಾಯಾಲಯ ತಿಳಿಸಿದೆ.
ಈ ಪ್ರಕರಣದ ನಂತರ ರಾಷ್ಟ್ರೀಯ ಮಹಿಳಾ ಆಯೋಗ, ರಾಜ್ಯ ಮಹಿಳಾ ಆಯೋಗ ಹಾಗೂ ವಿವಿಧ ಸತ್ಯಸಂಶೋಧನಾ ಸಮಿತಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದವು. ಪ್ರಕರಣದ ತೀರ್ಪು ಮಹಿಳೆಯರ ವಿರುದ್ಧ ನಡೆಯುವ ಗುಂಪು ಹಿಂಸೆ ಹಾಗೂ ಅಮಾನವೀಯ ಕೃತ್ಯಗಳ ವಿರುದ್ಧ ನ್ಯಾಯಾಂಗದ ಕಠಿಣ ನಿಲುವನ್ನು ಪ್ರತಿಬಿಂಬಿಸುತ್ತದೆ ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.
