ಬಳ್ಳಾರಿ / ಬೆಂಗಳೂರು: ಇತ್ತೀಚೆಗೆ ನಡೆದ ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಸ್ಥಳೀಯ ಶಾಸಕ ಭರತ್ ರೆಡ್ಡಿ ಅವರು ತೋರಣಗಲ್ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಘಟನೆಯ ವಿವರಗಳನ್ನು ನೀಡಿದ್ದಾರೆ.
ಸಚಿವರು ಹಾಗೂ ಶಾಸಕರು ಜಿಲ್ಲೆಯಲ್ಲಿ ನಡೆದ ಬೆಳವಣಿಗೆಗಳು, ಕಾನೂನು ಸುವ್ಯವಸ್ಥೆಯ ಸ್ಥಿತಿ ಹಾಗೂ ಆಡಳಿತಾತ್ಮಕ ಕ್ರಮಗಳ ಕುರಿತು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.
ಇದಕ್ಕೂ ಮುನ್ನ, ಮುಖ್ಯಮಂತ್ರಿ ಅವರು ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಡಿಜಿಪಿ ಹಿತೇಂದ್ರ, ಬಳ್ಳಾರಿ ವಲಯದ ಐಜಿ ವರ್ತಿಕಾ ಕಟಿಯಾರ್ ಹಾಗೂ ದಾವಣಗೆರೆ ವಲಯದ ಐಜಿ ರವಿಕಾಂತೇಗೌಡ ಅವರಿಂದಲೂ ಘಟನೆ ಕುರಿತು ವಿವರವಾದ ಮಾಹಿತಿ ಪಡೆದುಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಂಧನೂರಿನಿಂದ ಹೆಲಿಕಾಪ್ಟರ್ ಮೂಲಕ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ನಂತರ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲೆಯ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
