ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ನಾಸಿರ್ ಹುಸೇನ್ ಅವರ ಬೆಂಬಲಿಗನೋರ್ವ ವಿಧಾನಸೌಧದಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನ ಪರ ಘೋಷಣೆ (pro-Pak slogans) ಕೂಗಿದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ರಾಜ್ಯ ಬಿಜೆಪಿ ನಿಯೋಗ ದೂರು ನೀಡಿದೆ. ಇನ್ನು ವಿಧಾನಸೌಧ ಠಾಣೆ ಪೊಲೀಸರು, ಘೋಷಣೆ ಕೂಗಿದ ಅಪರಿಚಿತ ವ್ಯಕ್ತಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಕರ್ತವ್ಯ ನಿರತ ಎಎಸ್ಐ ನೀಡಿದ ದೂರಿನ ಅನ್ವಯ ಸೆಕ್ಷನ್ 505(1)(B), 153B ಅಡಿಯಲ್ಲಿ ಕೇಸ್ ದಾಖಲಾಗಿದೆ.
ಇನ್ನೂ ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ನಾಸಿರ್ ಹುಸೇನ್ ಅವರ ಬೆಂಬಲಿಗನೋರ್ವ ಶತ್ರು ರಾಷ್ಟ್ರ ಪಾಕಿಸ್ತಾನ ಪರ ಘೋಷಣೆ ಕೂಗಿ ಉದ್ದಟತನ ಮೆರೆದಿದ್ದಾನೆ. ಬಗ್ಗೆ ರಾಜ್ಯ ಸೇರಿ ದೇಶಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿವೆ
ದಿನಾಂಕ: 27-02-2024 ರಂದು ನಡೆದ ರಾಜ್ಯಸಭಾ ಚುನಾವಣೆ ನಂತರ ಗೆದ್ದ ವ್ಯಕ್ತಿ ಡಾ. ನಾಸೀರ್ ಹುಸೇನ್ ರವರ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಸಂಜೆ 6-00 ಗಂಟೆಯಿಂದ 6-30 ರ ಸಮಯದಲ್ಲಿ ಯಾರೋ ಒಬ್ಬ ವ್ಯಕ್ತಿ ವಿಧಾನಸೌಧದ ಪೂರ್ವ ದ್ವಾರದ ಬಳಿ ಪಾಕಿಸ್ತಾನ ಜಿಂದಬಾದ್ ಎಂದು ಘೋಷಣೆ ಕೂಗಿದ ಎಂಬ ಸುದ್ದಿ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಬರುತ್ತಿದೆ. ಈ ಸಂಬಂಧವಾಗಿ ಲಭ್ಯವಿರುವ ವಿಡಿಯೋಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರಾದ ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ಜ್ಯೋತಿ ಗಣೇಶ್ ಅವರಿದ್ದ ನಿಯೋಗ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಅಲ್ಲದೇ ಪಾಕ್ ಪರ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಬೇಕೆಂದು ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿದ್ದಾರೆ.