ಬೆಂಗಳೂರು:
ಕೋವಿಡ್-19 ಮೂರನೇ ಅಲೆಯ ಮುನ್ಸೂಚನೆ ಹಿನ್ನೆಲೆ, ಕೋವಿಡ್ ನಿಯಮಗಳ ಪಾಲನೆಯೊಂದಿಗೆ, ಸರಳವಾಗಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ “73ನೇ ಗಣರಾಜ್ಯೋತ್ಸವ ದಿನಾಚರಣೆ” ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವು ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪ್ಲಾಸ್ಟಿಕ್ ರಹಿತ ವೇದಿಕೆ ನಿರ್ಮಿಸಲು ತಿಳಿಸಿದರಲ್ಲದೆ, ವೇದಿಕೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಜಾನಪದ ಕಲಾ ತಂಡಗಳ ಪ್ರದರ್ಶನ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗೆ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ “73ನೇ ಗಣರಾಜ್ಯೋತ್ಸವ ದಿನಾಚರಣೆ” ಕಾರ್ಯಕ್ರಮದ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. pic.twitter.com/THx24mAyNm
— Deputy Commissioner Bengaluru Rural (@DC_Bng_Rural) January 11, 2022
ಕೃಷಿ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಜಿಲ್ಲೆಯಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ, ಗೌರವಿಸಲು ಸಂಬಂಧಿಸಿದ ಇಲಾಖಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಕುಡಿಯುವ ನೀರು, ಲಘು ಉಪಹಾರ ವ್ಯವಸ್ಥೆ ಮಾಡುವಂತೆ ಹಾಗೂ ನೈರ್ಮಲ್ಯ ಕಾಪಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವುದರ ಜೊತೆಗೆ ಕಾರ್ಯಕ್ರಮದಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ, ಸಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣ್ಣಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭವ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಆರಾಧ್ಯ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ, ದೇವನಹಳ್ಳಿ ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.