ಸೆಪ್ಟೆಂಬರ್ 5ರಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರಜಾಸೇವಾ ಆಂದೋಲನ; ಸಿದ್ಧತೆಗೆ ಡಿಸಿ ಕಾಂತರಾಜು ಸೂಚನೆ
ಬೆಂಗಳೂರು, ಸೆಪ್ಟೆಂಬರ್ 3: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 5ರಿಂದ ಪ್ರಜಾಸೇವಾ ಆಂದೋಲನ ಅಭಿಯಾನದ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಆಯೋಜಿಸಲಾಗುತ್ತಿರುವ ಪ್ರಜಾಸೇವಾ ಆಂದೋಲನ ಅಭಿಯಾನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅವರು ಈ ಸೂಚನೆಗಳನ್ನು ನೀಡಿದರು.
ಮುಖ್ಯಮಂತ್ರಿಗಳ ಆಶಯದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರ ಮನವಿಗಳಿಗೆ ಕ್ರಿಯಾಶೀಲವಾಗಿ ಸ್ಪಂದಿಸಬೇಕು ಎಂದು ಕಾಂತರಾಜು ಹೇಳಿದರು.
ಜನಸಾಮಾನ್ಯರಿಗಾಗಿ ರೂಪಿಸಲಾಗಿರುವ ಸರ್ಕಾರದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ತುರ್ತಾಗಿ ಕಾರ್ಯೋನ್ಮುಖರಾಗಬೇಕು ಎಂದು ಅವರು ಸೂಚಿಸಿದರು.
ಜನರ ಮನೆಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹಾಗೂ ಸಾರ್ವಜನಿಕರ ಕುಂದುಕೊರತೆ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಭಿಯಾನದ ಅಂಗವಾಗಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಭೆಗಳು ನಡೆಯಲಿವೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಸಭೆಗಳನ್ನು ನಡೆಸಲಾಗುತ್ತದೆ ಎಂದು ಅವರು ಹೇಳಿದರು.
ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ನಡೆಯುವ ಪ್ರಜಾಸೇವಾ ಆಂದೋಲನ ಸಭೆಗಳಿಗೆ ಯಾವುದೇ ಅಧಿಕಾರಿ ಗೈರುಹಾಜರಾಗದೆ ಕಡ್ಡಾಯವಾಗಿ ಭಾಗವಹಿಸಬೇಕು. ಇದಕ್ಕಾಗಿ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು ಎಂದು ಕಾಂತರಾಜು ಸೂಚಿಸಿದರು.
ಸಭೆಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಸ್ವೀಕರಿಸುವುದಕ್ಕೆ ಮಾತ್ರ ಸೀಮಿತವಾಗದೆ, ಅವರೊಂದಿಗೆ ಸಮಸ್ಯೆಗಳ ಕುರಿತು ಚರ್ಚಿಸಿ, ಸಮಾಲೋಚನೆ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಬೇಕು ಎಂದು ಅವರು ಹೇಳಿದರು. ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸುವುದರ ಜೊತೆಗೆ ಸಾರ್ವಜನಿಕರಿಗೆ ಅಭಿಯಾನ ಆಯೋಜನೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಸಭೆ ನಡೆಯುವ ಸ್ಥಳಗಳಲ್ಲಿ ಸಾರ್ವಜನಿಕ ಜಾಗೃತಿಗಾಗಿ ಕೃಷಿ, ತೋಟಗಾರಿಕೆ, ರೇಷ್ಮೆ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳು ತಾವು ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುವ ಮಳಿಗೆಗಳನ್ನು ತೆರೆಯಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಸಾರ್ವಜನಿಕರು ಪ್ರಜಾಸೇವಾ ಆಂದೋಲನದ ಅರ್ಜಿ ನಮೂನೆಗಳನ್ನು ತಾಲೂಕು ಕಚೇರಿ, ನಗರಸಭೆ ಸೇರಿದಂತೆ ಸಂಬಂಧಿಸಿದ ಕಚೇರಿಗಳಲ್ಲಿ ಪಡೆದು ಭರ್ತಿ ಮಾಡಿ ತಾಲೂಕು ಮತ್ತು ಹೋಬಳಿ ಮಟ್ಟದ ಸಭೆಗಳಲ್ಲಿ ಸಲ್ಲಿಸಬಹುದು.
ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಪ್ರತಿ ಬುಧವಾರ ಪರಿಶೀಲಿಸಲಾಗುವುದು ಎಂದು ಕಾಂತರಾಜು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ. ನಾಯಕ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪೂರ್ವಸಿದ್ಧತಾ ಸಭೆಯಲ್ಲಿ ಉಪಸ್ಥಿತರಿದ್ದರು.
