ಬೆಸ್ಕಾಂ ಎಇಇ ₹15 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ
ಬೆಂಗಳೂರು, ಮೇ 29: ಬೆಂಗಳೂರಿನ ಬಸವೇಶ್ವರನಗರದಲ್ಲಿ ₹15 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬಂಧಿತ ಅಧಿಕಾರಿಯನ್ನು ಬೆಸ್ಕಾಂ ಜಾಗೃತ ದಳದ ಎಇಇ ಬಸವರಾಜ್ ಎಂದು ಗುರುತಿಸಲಾಗಿದೆ. ಅಪಾರ್ಟ್ಮೆಂಟ್ವೊಂದರ ವಿದ್ಯುತ್ ಬಿಲ್ ಸಂಬಂಧದ ವಿಚಾರವನ್ನು ಬಗೆಹರಿಸುವುದಾಗಿ ಹೇಳಿ ಅವರು ಒಟ್ಟು ₹65 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಈ ಸಂಬಂಧ ದೂರು ಸ್ವೀಕರಿಸಿದ್ದ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು. ಅದರಂತೆ ಬಸವರಾಜ್ ₹15 ಲಕ್ಷ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಅವರನ್ನು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯ ಬಳಿಕ ಅಧಿಕಾರಿಯನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಲಂಚದ ಬೇಡಿಕೆಯ ಹಿಂದಿನ ಕಾರಣಗಳು ಹಾಗೂ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ತನಿಖೆಯ ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
