ಬೆಳಗಾವಿ: ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ಸಮುದಾಯಗಳಿಗೆ ಸೇರಿದ ಸಿವಿಲ್ ಗುತ್ತಿಗೆದಾರರಿಗೆ ಸರ್ಕಾರದ ಕಾಮಗಾರಿಗಳಲ್ಲಿ ₹1 ಕೋಟಿವರೆಗೆ ಮೀಸಲಾತಿ ಒದಗಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಜೊತೆಗೆ ಉದ್ಯಮಿಗಳಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.6 ಬಡ್ಡಿದರದಲ್ಲಿ ₹10 ಕೋಟಿವರೆಗೆ ಸಾಲ ಹಾಗೂ ಸಹಾಯಧನ ನೀಡುವ ಯೋಜನೆಗೂ ವೇಗ ಸಿಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ನಮೂನೆ-I ನಲ್ಲಿ ಪ್ರತ್ಯೇಕ ಜಾತಿ ಪ್ರಮಾಣ ಪತ್ರ ವಿತರಣೆ ವ್ಯವಸ್ಥೆಯನ್ನು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ತಂತ್ರಾಂಶದಲ್ಲಿ ಅಳವಡಿಸಲು ರಾಷ್ಟ್ರೀಯ ಮಾಹಿತಿ ಕೇಂದ್ರಕ್ಕೆ (NIC) ಕೋರಿಕೆ ಸಲ್ಲಿಸಲಾಗಿದೆ. ತಂತ್ರಾಂಶದಲ್ಲಿ ಈ ವ್ಯವಸ್ಥೆ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು 2ಎ ಸಮುದಾಯಗಳಿಗೆ ಸಿವಿಲ್ ಗುತ್ತಿಗೆ ಕಾಮಗಾರಿಗಳಲ್ಲಿ ₹1 ಕೋಟಿವರೆಗೆ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಇದರ ಅನುಷ್ಠಾನಕ್ಕಾಗಿ ಕಂದಾಯ ಇಲಾಖೆಯಿಂದ ಪ್ರತ್ಯೇಕ ಜಾತಿ ಪ್ರಮಾಣ ಪತ್ರ ನೀಡುವ ಅಗತ್ಯವಿದೆ.
ಈ ಸಂಬಂಧವಾಗಿ ವಿಧಾನ ಪರಿಷತ್ತಿನ ಸದಸ್ಯರಾದ ಡಾ. ಯತೀಂದ್ರ ಎಸ್. ಅವರು ನಿಯಮ 72ರ ಅಡಿಯಲ್ಲಿ ಗಮನ ಸೆಳೆಯುವ ಸೂಚನೆ ನೀಡಿದ್ದು, ಅದಕ್ಕೆ ಉತ್ತರವಾಗಿ ಸಚಿವ ಕೃಷ್ಣಬೈರೇಗೌಡ ಅವರು ವಿಧಾನ ಪರಿಷತ್ತಿನಲ್ಲಿ ಲಿಖಿತ ಉತ್ತರ ನೀಡಿದರು.
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಗುತ್ತಿಗೆದಾರರು ಮತ್ತು ಉದ್ಯಮಿಗಳಿಗೆ ಆರ್ಥಿಕ ಭದ್ರತೆ ಒದಗಿಸುವುದು, ಅವರ ಭಾಗವಹಿಸುವಿಕೆಯನ್ನು ಸರ್ಕಾರಿ ಕಾಮಗಾರಿಗಳಲ್ಲಿ ಹೆಚ್ಚಿಸುವುದು ಮತ್ತು ಸಾಮಾಜಿಕ ನ್ಯಾಯವನ್ನು ಬಲಪಡಿಸುವುದು ಈ ಕ್ರಮಗಳ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.
