ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ವಶಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಶಾಸಕರನ್ನು ರವಿವಾರ ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಯಿತು. ಅದಕ್ಕೂ ಮೊದಲು ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ಹೃದಯ ಸಂಬಂಧಿತ ಅಸ್ವಸ್ಥತೆ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲು ಬೌರಿಂಗ್ ಆಸ್ಪತ್ರೆ ವೈದ್ಯರು ಸೂಚಿಸಿದ್ದರು. ವೈದ್ಯಕೀಯ ವರದಿ ಪರಿಶೀಲಿಸಿದ ನ್ಯಾಯಾಧೀಶರು, ಆರೋಗ್ಯ ಸ್ಥಿತಿ ಸಹಜವಾಗಿದೆ ಎಂದು ಗಮನಿಸಿ ಸಿಐಡಿ ವಶಕ್ಕೆ ನೀಡುವಂತೆ ಆದೇಶಿಸಿದ್ದಾರೆ.
ಸಿಐಡಿ ಪರ ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್ಪಿಪಿ) ಅಶೋಕ್ ನಾಯ್ಕ್ ಹಾಗೂ ತನಿಖಾಧಿಕಾರಿ ಡಿವೈಎಸ್ಪಿ ಗೌತಮ್ ನ್ಯಾಯಾಲಯದ ಮುಂದೆ ವೈದ್ಯಕೀಯ ವರದಿ ಸಲ್ಲಿಸಿದರು. ವರದಿ ಪರಿಶೀಲಿಸಿದ ಬಳಿಕ ಫೆ.15ರಿಂದ ಫೆ.21ರವರೆಗೆ ಏಳು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಲಾಗಿದೆ.
ಜುಲೈ 15ರಂದು ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯ ಎದುರು ರೌಡಿಶೀಟರ್ ಬಿಕ್ಲು ಶಿವ ಯಾನೆ ಶಿವಪ್ರಕಾಶ್ ಅವರನ್ನು 8-9 ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಆರೋಪಿಗಳು ಕಾರಿನಲ್ಲಿ ಬಂದು ದಾಳಿ ನಡೆಸಿ ಪರಾರಿಯಾಗಿದ್ದರು.
ಜಮೀನು ವಿವಾದ ಹಿನ್ನೆಲೆ ಕೊಲೆ ನಡೆದಿದೆ ಎಂದು ಆರೋಪಿಸಿ ಮೃತನ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್ ಸೇರಿದಂತೆ ಶಾಸಕ ಬೈರತಿ ಬಸವರಾಜ್ ವಿರುದ್ಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಸಿಐಡಿ ಮುಂದುವರೆಸಿದ್ದು, ಮುಂದಿನ ಬೆಳವಣಿಗೆಗಳಿಗಾಗಿ ಕಾಯಲಾಗುತ್ತಿದೆ.
