ಬೆಂಗಳೂರು : ಹಿರಿಯ ಬಿಜೆಪಿ ಮುಖಂಡ ಮಾಲಿಕಯ್ಯ ಗುತ್ತೇದಾರ್ ಅವರು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಶುಕ್ರವಾರ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಾಲಿಕಯ್ಯ ಗುತ್ತೇದಾರ ಅವರ ಸಹೋದರ ನಿತೀನ್ ಗುತ್ತೇದಾರ್ ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡ ಬೆನ್ನಲ್ಲೇ ಮಾಲಿಕಯ್ಯ ಗುತ್ತೇದಾರ್ ಬಿಜೆಪಿ ನಾಯಕರ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದ್ದರು. ಎ.16 ರಂದು ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಭೆಯಲ್ಲಿ ಬಿಜೆಪಿ ವಿರುದ್ಧ ಗುಡುಗಿದ್ದರು. ಸಭೆಯಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಒಮ್ಮತ ತೀರ್ಮಾನ ಕೈಗೊಳ್ಳಲಾಗಿತ್ತು.
ಇಂದು ಬೆಳ್ಳಗ್ಗೆ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮೆಚ್ಚಿ, ಕಲಬುರಗಿಯ ಅಭಿವೃದ್ಧಿಗಾಗಿ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಶಾರದಾ ಮೋಹನ್ ಶೆಟ್ಟಿ ಅವರು ಸಹ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ ಎನ್ ರಾಜಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದ ರಾಜು, ವಿಧಾನ ಪರಿಷತ್ ಸದಸ್ಯ ನಾಗರಾಜು ಯಾದವ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.