ಕಾಂಗ್ರೆಸ್ ಸರ್ಕಾರದ ವಿರುದ್ಧ ಕ್ಷೇತ್ರವಾರು ಆರೋಪಪಟ್ಟಿ ಸಿದ್ಧಪಡಿಸಲು ಬಿಜೆಪಿ ತೀರ್ಮಾನ: ಸಿ.ಟಿ. ರವಿ
ಬೆಂಗಳೂರು, ಮೇ 23: ಕರ್ನಾಟಕದಲ್ಲಿ ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಕ್ಷೇತ್ರವಾರು ಆರೋಪಪಟ್ಟಿ ಸಿದ್ಧಪಡಿಸಿ ಜನರ ಮುಂದೆ ಇಡಲು ಬಿಜೆಪಿ ತೀರ್ಮಾನಿಸಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರೊಂದಿಗೆ ನಡೆದ ಸಭೆಯ ಬಳಿಕ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ವೈಫಲ್ಯಗಳನ್ನು ಜನರಿಗೆ ತಲುಪಿಸುವಂತೆ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಅಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ನಿತಿನ್ ನವೀನ್ ಅವರು ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಕರ್ನಾಟಕಕ್ಕೆ ಮೊದಲ ಅಧಿಕೃತ ಭೇಟಿ ನೀಡಿದ್ದು, ಸಂಸದರು, ಶಾಸಕರು ಹಾಗೂ ಜಿಲ್ಲಾಮಟ್ಟದ ನಾಯಕರೊಂದಿಗೆ ಸಂಘಟನಾ ಬಲವರ್ಧನೆ ಹಾಗೂ ಚುನಾವಣಾ ಸಿದ್ಧತೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳ ಕುರಿತು ವಿವರವಾದ ಆರೋಪಪಟ್ಟಿ ಸಿದ್ಧಪಡಿಸಿ ಜನರ ಮುಂದೆ ಇಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಸೂಚಿಸಿದ್ದಾರೆ ಎಂದು ಸಿ.ಟಿ. ರವಿ ಹೇಳಿದರು.
ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸಚಿವರ ಮೇಲೆಯೇ ಭ್ರಷ್ಟಾಚಾರದ ಆರೋಪಗಳಿವೆ. ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಚಾರದಲ್ಲೇ ಹೆಚ್ಚು ತೊಡಗಿಕೊಂಡಿದ್ದು, ಜನರ ನೈಜ ಸಮಸ್ಯೆಗಳ ಪರಿಹಾರದಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ನಿರುದ್ಯೋಗ, ಮಹಿಳಾ ಸುರಕ್ಷತೆ ಹಾಗೂ ಜನಸಾಮಾನ್ಯರ ಬದುಕಿನ ಸಮಸ್ಯೆಗಳು ಹೆಚ್ಚಾಗಿವೆ ಎಂದು ಅವರು ಹೇಳಿದರು.
ವಿರೋಧಿ ಅಲೆ ಮಾತ್ರದಿಂದ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಭಾವಿಸಬಾರದು ಎಂದು ನಿತಿನ್ ನವೀನ್ ಎಚ್ಚರಿಕೆ ನೀಡಿದ್ದಾರೆ ಎಂದು ರವಿ ಹೇಳಿದರು.
ತಮಿಳುನಾಡಿನಲ್ಲಿ ಡಿಎಂಕೆ ವಿರುದ್ಧ ಅಸಮಾಧಾನ ಇದ್ದರೂ ಹೊಸ ರಾಜಕೀಯ ಶಕ್ತಿಗಳು ಬೆಳೆಯುತ್ತಿರುವುದನ್ನು ಉದಾಹರಿಸಿದ ಅವರು, ಕರ್ನಾಟಕದಲ್ಲೂ ಬಿಜೆಪಿ ಜನಪರ ಹೋರಾಟಗಳ ಮೂಲಕ ವಿಶ್ವಾಸಾರ್ಹ ಪರ್ಯಾಯವಾಗಿ ಹೊರಹೊಮ್ಮಬೇಕು ಎಂದು ಹೇಳಿದರು.
ಕರ್ನಾಟಕದಲ್ಲಿ ಬಿಜೆಪಿ ಅತ್ಯಂತ ಬಲಿಷ್ಠ ಸಂಘಟನೆ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ. ಜನಪರ ಹೋರಾಟಗಳನ್ನು ನಿರಂತರವಾಗಿ ನಡೆಸಿದರೆ ಜನರೇ ಬಿಜೆಪಿಗೆ ಅಧಿಕಾರ ನೀಡುತ್ತಾರೆ ಎಂದು ನಿತಿನ್ ನವೀನ್ ಹೇಳಿದ್ದಾರೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ವಿಧಾನ ಪರಿಷತ್ ಚುನಾವಣೆ, ವಿಧಾನಸಭೆ ಉಪಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಸಮಗ್ರ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಹೇಳಿದರು.
ಎಸ್ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದ ಸಿ.ಟಿ. ರವಿ, ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರದ ಪ್ರತಿಯೊಂದು ನಿರ್ಧಾರವನ್ನೂ ವಿರೋಧಿಸುವ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು.
