ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ದುರಾಡಳಿತ ಮತ್ತು ಭ್ರಷ್ಟಾಚಾರವನ್ನು ಜನರ ಮುಂದೆ ತರುವ ಮೂಲಕ ಅಭ್ಯರ್ಥಿಗಳ ಗೆಲುವಿಗೆ ವಿಶೇಷ ಗಮನ ನೀಡಲಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ಹಾಗೂ ಪ್ರಮುಖ ನಾಯಕರು ಸೇರಿ ಜಿಲ್ಲಾ ಮಟ್ಟದ ಪ್ರಮುಖರ ಸಮಾವೇಶಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

“ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತರುವ ಮೂಲಕ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ನಾವು ಸಂಪೂರ್ಣ ಶ್ರಮವಹಿಸುತ್ತಿದ್ದೇವೆ,” ಎಂದು ಯಡಿಯೂರಪ್ಪ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತಿದೀರ್ಘ ಅವಧಿ ಮುಖ್ಯಮಂತ್ರಿಯಾಗಿ ದಾಖಲೆ ಮಾಡಿದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ದೇವರಾಜ ಅರಸು ಅವರ ಆಡಳಿತ ಶೈಲಿ ಬೇರೆ, ಇಂದಿನ ಸರ್ಕಾರದ ಆಡಳಿತ ಶೈಲಿ ಬೇರೆ ಎಂದು ಸ್ಪಷ್ಟಪಡಿಸಿದರು. “ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರ ಸಮಾವೇಶಗಳ ಮೂಲಕ ಸಾಧನೆ ಪ್ರದರ್ಶಿಸಲು ಹೊರಟಿರುವುದನ್ನು ಜನರು ಒಪ್ಪುವುದಿಲ್ಲ,” ಎಂದರು.
ರಾಜ್ಯದಲ್ಲಿ ಸಂಘಟನೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಜಿಲ್ಲಾವಾರು ವಿಶೇಷ ಸಭೆಗಳಲ್ಲಿ ಇಂದು ಪಾಲ್ಗೊಳ್ಳಲಾಯಿತು. pic.twitter.com/rOrE5aRIj0
— B.S.Yediyurappa (@BSYBJP) January 7, 2026
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಈಗಾಗಲೇ ಬಿಜೆಪಿ ಗೆಲುವಿನ ಹಾದಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಸ್ಪಷ್ಟವಾದ ಜಯವನ್ನು ಜನರು ಕಾಣಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಬೃಹತ್ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಗುರಿಯೊಂದಿಗೆ ಪಕ್ಷ ಕಾರ್ಯನಿರ್ವಹಿಸುತ್ತಿದೆ ಎಂದು ಯಡಿಯೂರಪ್ಪ ಹೇಳಿದರು.
