ಎಸ್ಟಿಪಿ ಘಟಕಗಳಲ್ಲಿ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳ ಕರೆ
ಬೆಂಗಳೂರು, ಜೂನ್ 30: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಅಧ್ಯಕ್ಷೆ ಡಾ. ಎನ್. ಮಂಜುಳ ಅವರು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ (ಎಸ್ಟಿಪಿ) ಕಾರ್ಯನಿರ್ವಹಿಸುವ ಸಿಬ್ಬಂದಿ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಹಾಗೂ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕರೆ ನೀಡಿದರು.
ಸೋಮವಾರ ಕಾವೇರಿ ಭವನದಲ್ಲಿ ಬೆಂಗಳೂರು ಜಲಮಂಡಳಿ ವತಿಯಿಂದ ಆಯೋಜಿಸಿದ್ದ ಆರೋಗ್ಯ ಮತ್ತು ಸುರಕ್ಷತೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಎಸ್ಟಿಪಿ ಘಟಕಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ತಮ್ಮ ಕರ್ತವ್ಯದ ವೇಳೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ನೌಕರರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಸುರಕ್ಷತಾ ವಿಧಾನಗಳು ಹಾಗೂ ಸಂಭವನೀಯ ಅಪಾಯಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಸಿಬ್ಬಂದಿ ತಮ್ಮ ಕಾರ್ಯಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆಗಳು, ತಾಂತ್ರಿಕ ಸವಾಲುಗಳು ಹಾಗೂ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳನ್ನು ಮುಕ್ತವಾಗಿ ಚರ್ಚಿಸಿ, ಪರಸ್ಪರ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಇಂತಹ ಕಾರ್ಯಾಗಾರಗಳು ಜಲಮಂಡಳಿಯ ಸುರಕ್ಷತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಲ್ಲಿ ಸುರಕ್ಷಿತ ಕಾರ್ಯಸಂಸ್ಕೃತಿಯನ್ನು ಬೆಳೆಸಲು ಸಹಕಾರಿಯಾಗಲಿವೆ ಎಂದು ಡಾ. ಮಂಜುಳ ಹೇಳಿದರು.
ಕಾರ್ಯಾಗಾರದಲ್ಲಿ ಜಲಮಂಡಳಿಯ ಮುಖ್ಯ ಎಂಜಿನಿಯರ್ಗಳು ಹಾಗೂ ಎಸ್ಟಿಪಿ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.