ಬೆಂಗಳೂರು/ಮಂಡ್ಯ:
ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ವಿಚಾರಕ್ಕೆ ಸಂಬಂಧಿಸಿ ಇಂದು ಮಂಡ್ಯ ನಗರ ಬಂದ್ಗೆ ರೈತ ಹಿತರಕ್ಷಣಾ ಸಮಿತಿ ಕರೆ ಕೊಟ್ಟಿದ್ದು ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ಮಂಡ್ಯ ನಗರ ಬಂದ್ ಆಗಲಿದೆ.
ಕಾವೇರಿ ಹಿತರಕ್ಷಣಾ ಸಮಿತಿ ಇಂದು ಮದ್ದೂರು ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಮದ್ದೂರು ಪಟ್ಟಣದಲ್ಲಿ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ. ಅಲ್ಲದೆ ತೆರೆದಿರುವ ಅಂಗಡಿಗಳನ್ನು ಹೋರಾಟಗಾರರು ಮುಚ್ಚಿಸುತ್ತಿದ್ದಾರೆ. ವ್ಯಾಪಾರಿಗಳ ಬಳಿ ಬಂದ್ ಮಾಡುವಂತೆ ಮನವಿ ಮಾಡುತ್ತಿದ್ದಾರೆ.
ಮಂಡ್ಯ ಬಂದ್ ಆಗಿದ್ದು ಬೆಂಗಳೂರಿನಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ರೈತರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಮಂಡ್ಯದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್ಗೆ ವರ್ತಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಬಂದ್ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮಂಡ್ಯ ಬಂದ್ಗೆ ಕರೆ ನೀಡಲಾಗಿದ್ದು ಮಂಡ್ಯದಲ್ಲಿ ಪ್ರತಿಭಟನೆ ಆರಂಭವಾಗಿದೆ. ಮಂಡ್ಯ ರಕ್ಷಣಾ ವೇದಿಕೆ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಸಂಜಯ್ ವೃತ್ತದಲ್ಲಿ ರಸ್ತೆಯಲ್ಲಿ ಟೀ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಸುಟ್ಟು ಟೀ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.