ಮಂಡ್ಯ:
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರೈತರು ಅರೆಬೆತ್ತಲೆ ಮೆರವಣಿಗೆ ನಡೆಸಿದರು.
ಭೂಮಿತಾಯಿ ಹೋರಾಟ ಸಮಿತಿಯು ಶ್ರೀರಂಗಪಟ್ಟಣದ ಕಾವೇರಿ ನದಿ ಸ್ನಾನಘಟ್ಟದಿಂದ ತಾಲೂಕು ಕಚೇರಿವರೆಗೆ ಅರೆ ಬೆತ್ತಲೆ ಮೆರವಣಿಗೆ ನಡೆಸಲಾಗಿದೆ. ಈ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಪಕ್ಷಾತೀತವಾಗಿ ನಡೆದ ಪ್ರತಿಭಟನೆಯಲ್ಲಿ ಕೈ ಕಾರ್ಯಕರ್ತರು ಭಾಗಿ
ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಹೋರಾಟವು ದಿನೇ ದಿನೇ ಕಾವೇರುತ್ತಿದೆ. ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಬಿಡಲು ಸೂಚನೆ ಹಿನ್ನೆಲೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿರುದ್ಧ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ರೈತ ಪರ, ಕನ್ನಡ ಪರ ಸೇರಿದಂತೆ ಹಲವು ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಲಾಯಿತು. ರಕ್ತ ಕೊಟ್ಟಿವು ನೀರು ಕೊಡಲ್ಲ ಎಂದು ಘೋಷಣೆಗಳನ್ನು ಕೂಗಲಾಯಿತು. ಈ ವೇಳೆ ಮಾಜಿ ಸಚಿವ ಆತ್ಮಾನಂದ, ರೈತ ಹೋರಾಗಾರ್ತಿ ಸುನಂದಾ ಜಯರಾಂ, ಮಾಜಿ ಎಂಎಲ್‌ಸಿ ಕೆಟಿ ಶ್ರೀಕಂಠೇಗೌಡ ಭಾಗಿಯಾದರು.