ಬೆಂಗಳೂರು: ಸಿಸಿಬಿ ಪೊಲೀಸ್ ಇನ್ ಸ್ಪೆಕ್ಟರ್ ತಿಮ್ಮೇಗೌಡ ಎಂಬವರು ರಾಮನಗರ ಜಿಲ್ಲೆಯ ಬಿಡದಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಇನ್ ಸ್ಪೆಕ್ಟರ್ ತಿಮ್ಮೇಗೌಡ ಅವರು ಒಂದು ತಿಂಗಳ ಹಿಂದೆಷ್ಟೇ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ಘಟನಾ ಸ್ಥಳಕ್ಕೆ ರಾಮನಗರ ಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ತಿಮ್ಮೇಗೌಡ ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ. ಸದ್ಯ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಕಳೆದ ವರ್ಷ ಆನೇಕಲ್‌ನಲ್ಲಿ ಪಟಾಕಿ ದುರಂತ ನಡೆದಿತ್ತು. ಆಗ ಇಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ತಿಮ್ಮೇಗೌಡ ಅವರು ಪಟಾಕಿ ಅಂಗಡಿಗೆ ಅನುಮತಿ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿತ್ತು. ನಂತರ ನಡೆದ ಇಲಾಖಾ ವಿಚಾರಣೆ ವೇಳೆ ಅವರಿಗೆ ಕ್ಲೀನ್ ಚಿಟ್ ಸಿಕ್ಕಿತ್ತು. ಹೀಗಿದ್ದರೂ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ತೀವ್ರ ಮಾನಸಿಕ ಒತ್ತಡ ಅನುಭವಿಸಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 2003ರ ಬ್ಯಾಚ್‌ನಲ್ಲಿ ತಿಮ್ಮೇಗೌಡ ಅವರು ಇಲಾಖೆಗೆ ಸೇರಿದ್ದರು.
ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕಿದ ನಂತರ ಸಿಸಿಬಿಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದರು. ಆದರೂ ಕೂಡಾ ಅವರು ಖಿನ್ನತೆಯಲ್ಲಿದ್ದರು ಎಂದು ತಿಳಿದುಬಂದಿದೆ. ತಿಮ್ಮೇಗೌಡ ಅವರ ಸಾವಿಗೆ ಇಲಾಖೆಯ ಹಿರಿಯ ಅಧಿಕಾರಿಗಳೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.