Home ಬೆಂಗಳೂರು ನಗರ ಕನ್ನಡದ ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ್ ಇನ್ನಿಲ್ಲ: ಗಣ್ಯರ ಸಂತಾಪ

ಕನ್ನಡದ ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ್ ಇನ್ನಿಲ್ಲ: ಗಣ್ಯರ ಸಂತಾಪ

72
0
Chandrashekhar patil is no more

ಬೆಂಗಳೂರು:

ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ, ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ್ ಅವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಚಂಪಾ ಅವರಿಗೆ 83 ವರ್ಷ ವಯಸ್ಸಾಗಿತ್ತು.

ಲೇಖಕರು, ಪ್ರಾಧ್ಯಾಪಕರು, ಸಂಘಟಕರು, ಪತ್ರಕರ್ತರೂ ಆಗಿದ್ದ ಪ್ರೊ.ಚಂದ್ರಶೇಖರ್ ಪಾಟೀಲ್ ಅವರಿಗೆ ಭಾನುವಾರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾದ ಪರಿಣಾಮ ಅವರನ್ನು ಬೆಂಗಳೂರಿನ ಕೋಣನಕುಂಟೆ ಕ್ರಾಸ್‌ ಬಳಿಯಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಗೆ ದಾಖಲಿಸಿದ ಬೆನ್ನಲ್ಲೇ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದರು. ಆದರೆ ಇಂದು ಮುಂಜಾನೆ ಅವರು ನಿಧನರಾಗಿದ್ದಾರೆ.

ಇದನ್ನೂ ಓದಿ:  ಸಕಲ ಪೊಲೀಸ್ ಗೌರವಗಳೊಂದಿಗೆ ಚಂಪಾ ಅಂತ್ಯಕ್ರಿಯೆ: ಸಿಎಂ ಬಸವರಾಜ ಬೊಮ್ಮಾಯಿ

2017ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.

ಮುಖ್ಯಮಂತ್ರಿ ಸಂತಾಪ

ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರು. ಚಂದ್ರಶೇಖರ್ ಪಾಟೀಲ್ ಅವರು ಚಂಪಾ ಎಂದೇ ಪ್ರಸಿದ್ಧರಾದವರು. ಚಂಪಾ ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು ಎಂದು ಚಂಪಾ ಅವರನ್ನು ಸಿಎಂ ಬಣ್ಣಿಸಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿ ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.

ಗೋವಿಂದ ಎಮ್ ಕಾರಜೋಳ, ಜಲಸಂಪನ್ಮೂಲ ಸಚಿವ

ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರ ಅಕಾಲಿಕ ಅಗಲಿಕೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದೆ.

ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ

ಚಂಪಾ ಎಂದೇ ಖ್ಯಾತರಾಗಿದ್ದ ಖ್ಯಾತ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

‘ಚಂದ್ರಶೇಖರ ಪಾಟೀಲರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ನಾಡಿನ ಭಾಷೆ, ಸಾಹಿತ್ಯ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು ಚಂಪಾ.

ಅವರು ಕ್ರಾಂತಿಕಾರಿ ಸಾಹಿತಿ ಮಾತ್ರವಲ್ಲದೇ, ವಿಮರ್ಶಕರು, ನಾಟಕಕಾರರು ಹಾಗೂ ಕವಿಗಳಾಗಿದ್ದರು. ರಾಜ್ಯದ ನಾಡು, ನುಡಿಗೆ ಅವರ ಸೇವೆ ಅವಿಸ್ಮರಣೀಯ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ.

ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಅಭಿಮಾನಿ ಬಳಗ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಕಂಬನಿ

ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷ ಹಾಗೂ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರು ಆಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕಂಬನಿ ಮಿಡಿದಿದ್ದಾರೆ.

ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಕುಮಾರಸ್ವಾಮಿ ಅವರು ಪ್ರಾರ್ಥಿಸಿದ್ದಾರೆ.

LEAVE A REPLY

Please enter your comment!
Please enter your name here