ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ (ಕೆಎಫ್‍ಡಿ) ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಶನಿವಾರ ಹಾಗೂ ರವಿವಾರ ಐದು ಮಂದಿಯಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 12 ಜನರಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದೆ. ಕಾಯಿಲೆಗೆ ತುತ್ತಾಗಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಜಿಲ್ಲೆಯ ಕೊಪ್ಪ ತಾಲೂಕು ವ್ಯಾಪ್ತಿಯಲ್ಲೇ ಮಂಗನಕಾಯಿಲೆ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಇದು ಇಲ್ಲಿನ ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಪತ್ತೆಯಾದ ಐದು ಮಂಗನಕಾಯಿಲೆ ಪ್ರಕರಣಗಳು ಕೊಪ್ಪ ತಾಲೂಕಿನಲ್ಲೇ ಕಂಡು ಬಂದಿವೆ. ಶೃಂಗೇರಿ ತಾಲೂಕಿನಲ್ಲಿ ವೃದ್ಧರೊಬ್ಬರಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೆ ಇತ್ತೀಚೆಗೆ ಮೃತಪಟ್ಟಿದ್ದರು.
ಜಿಲ್ಲೆಯಲ್ಲಿ ಇದುವರೆಗೆ 12 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಕೆಲವರು ಚೇತರಿಸಿಕೊಂಡಿದ್ದು, ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ವಹಿಸಿದೆ. ಮಂಗನಕಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆಗೊಸ್ಕರ ಕೊಪ್ಪ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ.