ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಸುತ್ತಮುತ್ತ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಸೇರಿದಂತೆ ವಿಜಯನಗರದಲ್ಲಿ ಮಧ್ಯಮ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೀದರ್‌ನಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯ ಸಿಂಚನವಾಗಲಿದೆ. ಕಲಬುರಗಿ, ಹಾವೇರಿ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.
ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ
ರಾಜಧಾನಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗವು ನಿರಂತರವಾಗಿ ಇರಲಿದ್ದು, 30-40 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲಿಯಸ್ ಇರಲಿದೆ.
ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿಯಲ್ಲೂ ಮಳೆಯು ಅಬ್ಬರಿಸಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಜತೆಗೆ ಬೀದರ್, ಗದಗ, ಕೊಪ್ಪಳ ಸೇರಿ ರಾಯಚೂರು, ಬಳ್ಳಾರಿ, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.