ಸುರಕ್ಷತಾ ಕ್ರಮಗಳೊಂದಿಗೆ ಬಂಡಿಪುರ–ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ
ಬೆಂಗಳೂರು, ಜೂನ್ 30: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಂಡಿಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಫಾರಿ ಹಾಗೂ ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸಂಬಂಧಿಸಿದ ಸಣ್ಣಪುಟ್ಟ ತಾಂತ್ರಿಕ ಅಂಶಗಳನ್ನು ನೆಪವನ್ನಾಗಿ ಮಾಡಿಕೊಂಡು ತಮಿಳುನಾಡು ಸುಪ್ರೀಂ ಕೋರ್ಟ್ನಲ್ಲಿ ಆಕ್ಷೇಪಣೆ ಸಲ್ಲಿಸಲು ಪ್ರಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದರೆ ಅವುಗಳನ್ನು ತಕ್ಷಣ ಪರಿಶೀಲಿಸಿ ಪರಿಣಾಮಕಾರಿಯಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಬಂಡಿಪುರ ಹಾಗೂ ನಾಗರಹೊಳೆ ಪರಿಸರ ಪ್ರವಾಸೋದ್ಯಮ ಮತ್ತು ಸಫಾರಿ ವಲಯಗಳಲ್ಲಿ ಹುಲಿ ಹಾಗೂ ಚಿರತೆಗಳ ಸಾಂದ್ರತೆ, ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಿರುವ ಹಲವು ಪ್ರದೇಶಗಳಿಗಿಂತ ಹೆಚ್ಚಾಗಿದೆ. ಆದ್ದರಿಂದ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಮಾತ್ರ ಸಫಾರಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಸಭೆಯಲ್ಲಿ ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ನಿರ್ಮಾಣದಿಂದ ಆನೆ, ಹುಲಿ ಹಾಗೂ ಚಿರತೆಗಳ ಸಾಂಪ್ರದಾಯಿಕ ಸಂಚಾರ ಮಾರ್ಗಗಳಿಗೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ಇದರ ಪರಿಣಾಮವಾಗಿ ವನ್ಯಜೀವಿಗಳು ಅರಣ್ಯ ಪ್ರದೇಶಗಳಿಂದ ಹೊರಬಂದು ಚನ್ನಪಟ್ಟಣ ಹಾಗೂ ರಾಮನಗರ ಭಾಗಗಳತ್ತ ಚಲಿಸುತ್ತಿದ್ದು, ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಾಗಲು ಇದು ಪ್ರಮುಖ ಕಾರಣವಾಗಿದೆ ಎಂದು ತಿಳಿಸಲಾಯಿತು.
ಇದೇ ವೇಳೆ ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ವೇ ನಿರ್ಮಾಣಕ್ಕೆ ಅನುಮತಿ ನೀಡುವ ಸಂದರ್ಭದಲ್ಲಿ ವನ್ಯಜೀವಿಗಳ ಸುರಕ್ಷಿತ ಸಂಚಾರಕ್ಕಾಗಿ ಅಂಡರ್ಪಾಸ್, ಓವರ್ಪಾಸ್ ಹಾಗೂ ವಿಶೇಷ ವನ್ಯಜೀವಿ ಕಾರಿಡಾರ್ಗಳನ್ನು ನಿರ್ಮಿಸುವ ಷರತ್ತು ವಿಧಿಸಲಾಗಿತ್ತು. ಆದರೆ ರಸ್ತೆ ನಿರ್ಮಾಣದ ವೇಳೆ ಈ ಷರತ್ತುಗಳನ್ನು ಸಮರ್ಪಕವಾಗಿ ಪಾಲಿಸಿಲ್ಲ ಎಂಬ ವಿಷಯವನ್ನು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.
ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿರುವ ಹಾಗೂ ಅಪಾಯಕಾರಿಯಾಗಿರುವ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸುವ ಕುರಿತು ಈ ಹಿಂದೆ ಸ್ಪಷ್ಟ ಸೂಚನೆ ನೀಡಲಾಗಿದ್ದರೂ, ಅದರ ಪರಿಣಾಮಕಾರಿ ಅನುಷ್ಠಾನವಾಗದ ಹಿನ್ನೆಲೆಯಲ್ಲಿ ಮಳೆ ಹಾಗೂ ಬಿರುಗಾಳಿಯ ಸಂದರ್ಭಗಳಲ್ಲಿ ಮರಗಳು ಮತ್ತು ಕೊಂಬೆಗಳು ಬಿದ್ದು ಅಪಘಾತಗಳು ಸಂಭವಿಸುತ್ತಿರುವುದಾಗಿ ಸ್ಥಾಯಿ ಸಮಿತಿ ಸದಸ್ಯರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರ್ವಜನಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿ, ಅಪಾಯಕಾರಿಯಾಗಿರುವ ಮರಗಳು ಹಾಗೂ ಕೊಂಬೆಗಳನ್ನು ತಕ್ಷಣ ಗುರುತಿಸಿ, ಅವುಗಳನ್ನು ತೆರವುಗೊಳಿಸುವ ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮುಖ್ಯಮಂತ್ರಿ ಅವರು ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಹಾಗೂ ವನ್ಯಜೀವಿ ಸಂರಕ್ಷಣೆಯ ನಡುವೆ ಸಮತೋಲನ ಕಾಯ್ದುಕೊಂಡು ಪರಿಸರ ಸಂರಕ್ಷಣೆ, ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನುಬದ್ಧ ನಿಯಮಗಳ ಪಾಲನೆಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.