ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಿಚಾರಣೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಇದೇ 22ರಂದು ಗುರುವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಗುರುವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯ ವಿರುದ್ಧ ಕಾನೂನಾತ್ಮಕ ಹೋರಾಟದ ಜೊತೆಗೆ ರಾಜಕೀಯ ಹೋರಾಟಕ್ಕೂ ಕಾಂಗ್ರೆಸ್ ಪಕ್ಷದ ನಾಯಕರು ಈಗಾಗಲೇ ನಿರ್ಧರಿಸಿದ್ದಾರೆ. ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವ ಕ್ರಮದ ಕುರಿತು ರಾಜಕೀಯ ಹೋರಾಟವನ್ನು ಯಾವ ರೀತಿಯಲ್ಲಿ ಕೈಗೊಳ್ಳಬೇಕು ಎಂಬ ಬಗ್ಗೆ ಶಾಸಕರ ಅಭಿಪ್ರಾಯ ಕೇಳಲು ಮತ್ತು ಈ ಬಗ್ಗೆ ಚರ್ಚಿಸಲು ಸಭೆ ಆಯೋಜಿಸಲಾಗಿದೆ ಎಂದೂ ಮೂಲಗಳು ತಿಳಿಸಿವೆ.