ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕವಾಗಿ ವಿಡಿಯೋ ಹರಿಬಿಟ್ಟಿದ್ದ ಕೇಂದ್ರ ಕಾರಾಗೃಹದ ಕಾನ್‌ಸ್ಟೇಬಲ್ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯ ವೇಳೆ ಸಿಎಂ ಸಿದ್ಧರಾಮಯ್ಯ ಪೊಲೀಸ್ ಅಧಿಕಾರಿಗೆ ಕೈ ಎತ್ತಿದ ಬಗ್ಗೆ ಎ.28 ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಆ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನುಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.