ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷವಿರೋಧಿ ಚಟುವಟಿಕೆ: ಎಂಎಲ್ಸಿ ಅಬ್ದುಲ್ ಜಬ್ಬಾರ್ ಅಮಾನತು
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆ ಎಂಎಲ್ಸಿ ಅಬ್ದುಲ್ ಜಬ್ಬಾರ್ ಅವರನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಅಮಾನತು ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಪಕ್ಷದ ನಿಯಮ ಉಲ್ಲಂಘನೆ ಮತ್ತು ಚುನಾವಣಾ ಸಂದರ್ಭದಲ್ಲಿ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಬೆನ್ಸನ್ ಟೌನ್ನಲ್ಲಿರುವ ನಿವಾಸದ ಅಬ್ದುಲ್ ಜಬ್ಬಾರ್ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದು, ಪಕ್ಷದಲ್ಲಿ ಸಕ್ರಿಯರಾಗಿದ್ದರು. ಆದರೆ ಉಪಚುನಾವಣೆಯ ಸಂದರ್ಭದಲ್ಲಿ ನಡೆದ ಘಟನೆಗಳ ಹಿನ್ನೆಲೆಯಲ್ಲಿ ಪಕ್ಷ ಶಿಸ್ತಿನ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಪಕ್ಷದ ಮೂಲಗಳ ಪ್ರಕಾರ, ಚುನಾವಣೆ ಸಮಯದಲ್ಲಿ ಪಕ್ಷದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷವು ಆಂತರಿಕ ಶಿಸ್ತು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ತಿಳಿಸಿದೆ.
