ಬೆಂಗಳೂರು:
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಹುದ್ದೆಯ ವಿಚಾರದಲ್ಲಿ ಪಕ್ಷ ಏನು ನಿರ್ಧರಿಸುತ್ತದೆಯೋ ಅದಕ್ಕೆ ಬದ್ಧವಾಗಿರುತ್ತೇನೆ ಎಂದು ಹೇಳಿದ್ದಾರೆ.
ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಮತ್ತು 1978 ರಲ್ಲಿ ರಾಜ್ಯದಲ್ಲಿ ಪಕ್ಷ ಗೆಲುವು ಸಾಧಿಸಿದಂತೆ ಈ ಬಾರಿಯೂ ಗೆಲುವು ಸಾಧಿಸುವ ಮೂಲಕ ಲೋಕಸಭೆ ಚುನಾವಣೆ ಗೆಲುವಿಗೂ ಬಾಗಿಲು ತೆರೆಯುತ್ತದೆ ಎಂದು ಡಿಕೆಶಿ ಹೇಳಿದ್ದಾರೆ.
ಬಿಜೆಪಿ ಚುನಾವಣೆ ಪ್ರಣಾಳಿಕೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿಯಂತಹ ವಿಷಯಗಳನ್ನು ಪ್ರಸ್ತಾಪಿಸಿದ್ದಕ್ಕೆ ಕೇಸರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ, ಇದು ಅವರ “ದಿವಾಳಿತನ”ದ ಕಲ್ಪನೆಗಳು ಮತ್ತು ದೂರದೃಷ್ಟಿಯನ್ನು ತೋರಿಸುತ್ತದೆ ಎಂದರು.
ಬಿಜೆಪಿಗೆ ಕರ್ನಾಟಕದ ಬಗ್ಗೆ ಯಾವುದೇ ಅಜೆಂಡಾ ಮತ್ತು ದೂರದೃಷ್ಟಿ ಇಲ್ಲದಿರುವುದರಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೋದಿ ಫ್ಯಾಕ್ಟರ್ ಕೆಲಸ ಮಾಡುವುದಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆಗೆ ಮುಖ್ಯಮಂತ್ರಿ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿರುವ ಶಿವಕುಮಾರ್, ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದ ಎಲ್ಲಾ ಕಥೆಗಳು ಮಾಧ್ಯಮಗಳ ಸೃಷ್ಟಿ. ಅವುಗಳಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದಿದ್ದಾರೆ.
“ವಾಸ್ತವವೆಂದರೆ ಕಾಂಗ್ರೆಸ್ ನಾಯಕತ್ವವು ಒಗ್ಗಟ್ಟಾಗಿದೆ ಮತ್ತು ಪಕ್ಷದ ಕಾರ್ಯಕರ್ತರು ನಮ್ಮ ಸಂದೇಶವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲು ನಾವು ಒಟ್ಟಾಗಿ ಪ್ರಯತ್ನ ಮಾಡುತ್ತಿದ್ದೇವೆ” ಡಿಕೆಶಿ ಪ್ರತಿಪಾದಿಸಿದರು.