ನವದೆಹಲಿ, ನ.27 ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಕೊಡಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ದೆಹಲಿಯಲ್ಲಿ ಪ್ರಹ್ಲಾದ್ ಜೋಷಿ ಅವರನ್ನು ಬುಧವಾರ ಭೇಟಿ ಮಾಡಿದ ಶಿವಕುಮಾರ್ ಅವರು ಜನ್ಮದಿನದ ಶುಭಾಶಯ ಕೋರಿ, ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.
“ಮೇಕೆದಾಟು ಯೋಜನೆಯು ಸುಸ್ಥಿರ ಕುಡಿಯುವ ನೀರಿನ ಯೋಜನೆಯಾಗಿದ್ದು, ಈ ಯೋಜನೆ ಜಾರಿ ಅಗತ್ಯವಾಗಿದೆ. ಕೃಷ್ಣಾ ವಿವಾದಿತ ನೀರು ನ್ಯಾಯಾಧಿಕರಣ 2ರ ತೀರ್ಪಿನ ಅನ್ವಯ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಗೇಜೆಟ್ ನೋಟಿಫಿಕೇಷನ್ ಹೊರಡಿಸಬೇಕು. ಇದರ ಜತೆಗೆ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಬೇಕು” ಎಂದು ಮನವಿ ಮಾಡಿದರು.
“ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಿ ನೀರಾವರಿ ಸೌಲಭ್ಯ ಹೆಚ್ಚಿಸಿ ರೈತರಿಗೆ ನೀರು ಒಧಗಿಸಿಕೊಡಬೇಕು. ಇನ್ನು ಮಹದಾಯಿ ಯೋಜನೆಗೆ ಅಗತ್ಯ ಅನುಮತಿ ಕೊಡಿಸಿ ಈ ಭಾಗದಲ್ಲಿರುವ ನೀರಿನ ಅಭಾವ ನೀಗಿಸಬೇಕಿದೆ. ಈ ಪ್ರಮುಖ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅಗತ್ಯ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.