Decentralization in Panchayat Raj System: Karnataka Minister Priyank Kharge talks with experts to further simplify decentralization
ಬೆಂಗಳೂರು:
ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯೊಂದಿಗೆ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಸಭೆ ನಡೆಸಿದರು.
ಪಂಚಾಯತ್ ರಾಜ್ ಕಾಯ್ದೆ ಹಾಗೂ ಅದರ ಪರಿಣಾಮಕಾರಿ ಅನುಷ್ಠಾನದಲ್ಲಿ ಇಡೀ ದೇಶಕ್ಕೇ ಕರ್ನಾಟಕ ರಾಜ್ಯ ಮಾದರಿಯಾಗಿದ್ದು, ಅಧಿಕಾರ ವಿಕೇಂದ್ರೀಕರಣವನ್ನು ಮತ್ತಷ್ಟು ಸರಳಗೊಳಿಸಿ, ಸ್ವರಾಜ್ಯ ಹಾಗೂ ಸುರಾಜ್ಯ ನಿರ್ಮಾಣದ ಹಾದಿಯಲ್ಲಿ ಸಾಗಲು ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಹಲವಾರು ಹಿರಿಯ ಮುಖಂಡರೊಂದಿಗೆ ಸಚಿವರು ವಿಚಾರ ವಿನಿಮಯ ಮಾಡಿದರು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯೊಂದಿಗೆ ಸಭೆ ನಡೆಸಲಾಯಿತು.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 19, 2023
ಕರ್ನಾಟಕವು ಪಂಚಾಯತ್ ರಾಜ್ ಕಾಯ್ದೆ ಹಾಗೂ ಅದರ ಪರಿಣಾಮಕಾರಿ ಅನುಷ್ಠಾನದಲ್ಲಿ ಇಡೀ ದೇಶಕ್ಕೇ ಮಾದರಿ. ಅಧಿಕಾರ ವಿಕೇಂದ್ರೀಕರಣವನ್ನು ಮತ್ತಷ್ಟು ಸರಳಗೊಳಿಸಿ, ಸ್ವರಾಜ್ಯ… pic.twitter.com/Q8n3DuCWdj
ಕೇರಳ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಎಸ್.ಎಂ. ವಿಜಯಾನಂದ್, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ್ ಹೆಗಡೆ, ತಜ್ಞ ಸದಸ್ಯರುಗಳಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಕ್ಷೇತ್ರದ ಪರಿಣಿತರೂ ಮಾಜಿ ಶಾಸಕರೂ ಆದ ಡಿ.ಆರ್. ಪಾಟೀಲ್, ಮಾಜಿ ಲೋಕಸಭಾ ಸದಸ್ಯರಾದ ಸಿ. ನಾರಾಯಣಸ್ವಾಮಿ, ಜಿಲ್ಲಾ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಪಿ.ವೈ. ಘೋರ್ಪಡೆ ಭಾಗವಹಿಸಿ ಹಲವಾರು ಸಲಹೆಗಳನ್ನು ನೀಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಉಮಾ ಮಹದೇವನ್, ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಶ್ರೀಮತಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಕೆ.ಲಕ್ಷ್ಮೀಪ್ರಿಯಾ ಸಭೆಯಲ್ಲಿ ಪಾಲ್ಗೊಂಡಿದ್ದರು.
