Home ಆರೋಗ್ಯ ಒಂದು ವಾರ ಪರಿಶೀಲನೆ ಬಳಿಕ ಲಾಕ್ ಡೌನ್ ಬಗ್ಗೆ ನಿರ್ಧಾರ: ಸಿಎಂ

ಒಂದು ವಾರ ಪರಿಶೀಲನೆ ಬಳಿಕ ಲಾಕ್ ಡೌನ್ ಬಗ್ಗೆ ನಿರ್ಧಾರ: ಸಿಎಂ

58
0

ಬೆಂಗಳೂರು:

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು ಇದು ಎರಡನೇ ಅಲೆ ಮುನ್ಸೂಚನೆ ಎಂದು ತಜ್ಞರ ಸಮಿತಿ ತಿಳಿಸಿದ್ದು, ಪರಿಸ್ಥಿತಿ ಎದುರಿಸಲು ಕೆಲ ಸಲಹೆ ನೀಡಿದ್ದಾರೆ. ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತದೆ. ಮತ್ತೆ ಲಾಕ್‌ಡೌನ್ ಆಗಬಾರದು ಎಂದರೆ ಜನತೆ ಕಟ್ಟುನಿಟ್ಟಾಗಿ ಕೊರೋನಾ ನಿಯಮ ಪಾಲನೆ ಮಾಡಬೇಕು, ಇಲ್ಲದಿದ್ದಲ್ಲಿ ಕಠಿಣ ಕ್ರಮ ಅನಿವಾರ್ಯವೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕ ಸಲಹಾ, ತಜ್ಞರ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಪರಿಸ್ಥಿತಿ ಅವಲೋಕನ ಕುರಿತು ತಜ್ಞರ ಜೊತೆ ಸಮಾಲೋಚನೆ ಮಾಡಲಾಯಿತು. ಎಲ್ಲರ ಅಭಿಪ್ರಾಯದಂತೆ ಕಳೆದ 14 ದಿನಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿದೆ, ಮರಣ ದರ ಕಡಿಮೆ ಇದೆ. ಬೀದರ್, ಕಲಬುರಗಿ ಬೆಂಗಳೂರು ಗ್ರಾಮಾಂತರ, ತುಮಕೂರು ಉಡುಪಿ‌, ಬೆಂಗಳೂರು ನಗರ ಜಿಲ್ಲೆಯಲ್ಲಿ ಪಾಸಿಟಿವ್ ದರ ಹೆಚ್ಚಾಗಿದೆ. ಇದು ಕೊರೋನಾ ಎರಡನೇ ಅಲೆಯ ಮುನ್ಸೂಚನೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೆಚ್ಚು ಪಾಸಿಟಿವ್ ಇರುವ ಜಿಲ್ಲೆಯಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ ಎಂದರು.

ಮತದಾರರ ಪಟ್ಟಿ ಆಧರಿಸಿ ಹಿರಿಯ ನಾಗರಿಕರನ್ನು ಗುರುತಿಸಿ ಲಸಿಕೆ ಹಾಕುವುದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರಿಗೆ ಲಸಿಕೆ ಸೇರಿದಂತೆ ಕೊರೋನಾ ಹೆಚ್ಚು ಇರುವ ಜಿಲ್ಲೆಗಳಲ್ಲಿ ಕೈಗೊಳ್ಳುವ ಸಲಹೆ ನೀಡಿದೆ ಎಂದರು.

ಸಲಹೆ

ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಕಡ್ಡಾಯ, ಉಲ್ಲಂಘಿಸಿದಲ್ಲಿ ದಂಡ ಅನಿವಾರ್ಯ. ಮದುವೆ, ಸಮಾಜಿಕ ಧಾರ್ಮಿಕ ಕಾರ್ಯಕ್ರಮದಲ್ಲಿ 500 ಮೀರಬಾರದು, ಕೊರೊನಾ ಪರೀಕ್ಷೆ ಹೆಚ್ಚಿಸಬೇಕು, ರೋಗಲಕ್ಷಣ ಇರುವವರಿಗೆ ಪರೀಕ್ಷೆ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಸಲಹೆ ನೀಡಿದ್ದಾರೆ.

ಸಂಪರ್ಕಿತರ ಪತ್ತೆ ಚುರುಕುಗೊಳಿಸಬೇಕು, ಕೋವಿಡ್ ಆಸ್ಪತ್ರೆಗಳಲ್ಲಿ, ಆಕ್ಸಿಜನ್, ಐಸಿಯು ಕೋವಿಡ್ ಕೇರ್ ಗೆ ಸಿದ್ದತೆ ಮಾಡಿಕೊಳ್ಳಬೇಕು, ಖಾಸಗಿ ಆಸ್ಪತ್ರೆಯಲ್ಲಿ ಹಿಂದಿನಂತೆ ಚಿಕಿತ್ಸೆ ವ್ಯವಸ್ಥೆ ಮಾಡಬೇಕು, ಹಿರಿಯ ನಾಗರಿಕರಿಗೆ ಲಸಿಕೆ‌ ಚುರುಕುಗೊಳಿಸಬೇಕು, ಗ್ರಾಮೀಣ ಪ್ರದೇಶ, ಕೊಳಗೇರಿಯಲ್ಲಿ ಲಸಿಕೆ‌ ಹೆಚ್ಚಿಸಬೇಕು ಎಂದು ಸೂಚಿಸಲಾಗಿದೆ.

ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಜೊತೆ ನೆರವು ಪಡೆದು ಲಸಿಕೆ ವಾಹನಗಳಲ್ಲಿ ನಿಗದಿ ಮೀರಿ ಪ್ರಯಾಣಿಕರ‌ ಕರೆದೊಯ್ಯುವುದಕ್ಕೆ‌ ಕಡಿವಾಣ ಮಾಡಬೇಕು, ಹೆಚ್ಚಿನ ಅರಿವು ಮೂಡಿಸಲು ತೀರ್ಮಾನಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಮಹಾರಾಷ್ಟ್ರ, ಕೇರಳದಿಂದ ಬರುವವರ ಮೇಲೆ ನಿಗಾ ಇಡಲು ಸಲಹೆ ಬಂದಿದೆ. ಪ್ರಧಾನಿ ಮೋದಿ ಮಾರ್ಚ್ 17 ರಂದು ಎಲ್ಲ ಮುಖ್ಯಮಂತ್ರಿಗಳ ಜೊತೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಅವರ ಸಲಹೆ ಪಡೆದು ನಂತರ ಅನಿವಾರ್ಯವಾದಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ, ಮತ್ತೊಮ್ಮೆ ಲಾಕ್ ಡೌನ್ ಆಗಬಾರದು ಎನ್ನುವ ಅಪೇಕ್ಷೆ ಇದ್ದರೆ ಕಟ್ಟುನಿಟ್ಟಿನ ಕ್ರಮ ನೀವೇ ಕೈಗೊಳ್ಳಬೇಕು. ಈಗ ಕೊರೋನಾ ಜಾಗೃತಿ ಹೋಗಿದೆ, ಜಾತ್ರೆ ಸಂತೆಯಲ್ಲಿ‌ ಶೇ.80 ರಷ್ಟು ಜನ ಮಾಸ್ಕ್ ಧರಿಸುತ್ತಿಲ್ಲ, ಜನ ಸಹಕಾರ ಕೊಡಬೇಕು, ಜನರ ಸಹಕಾರ ಇಲ್ಲದೆ ಯಶಸ್ವಿ ಆಗಲ್ಲ ಎಂದು ಯಡಿಯೂರಪ್ಪ ಹೇಳಿದರು.

ದಂಡ ಹಾಕುವ ಮಟ್ಟಕ್ಕೆ ಜನರು ಹೋಗಬಾರದು, ಒಂದು ವಾರ ಕಾದು ನೋಡುತ್ತೇವೆ ನಂತರ ದಂಡ ಹಾಕುವುದು ಅನಿವಾರ್ಯ. ಕರ್ಫ್ಯೂ ಇತ್ಯಾದಿ ಇಂದು ಚರ್ಚೆ ಆಗಿಲ್ಲ, ಮೋದಿ ಸಭೆ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದೊಡ್ಡವರು, ಚಿಕ್ಕವರು ಎನ್ನುವ ಪ್ರಶ್ನೆ ಇಲ್ಲ, ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ, 500ಕ್ಕಿಂತ ಹೆಚ್ಚು ಜನ‌ಸೇರಬಾರದು, ಹೆಚ್ಚು ಜನ‌ ಸೇರುವುದಾದರೆ ಬ್ಯಾಚ್ ಗಳಲ್ಲಿ ಬರಲಿ ಎಂದು ಮುಖ್ಯಮಂತ್ರಿ ಹೇಳಿದರು.

ಸಭೆಯ ಮುಖ್ಯಾಂಶಗಳು:

  1. ಕಳೆದ 14 ದಿನಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಮರಣ ಪ್ರಮಾಣ ಕಡಿಮೆಯಾಗಿದೆ.
  2. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ,ಉಡುಪಿ, ತುಮಕೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ.
  3. ಇದು ಕೋವಿಡ್ 19ರ ಎರಡನೇ ಅಲೆಯ ಮುನ್ಸೂಚನೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
  4. ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಬೇಕಾಗಿದೆ ಎಂದು ಅಧಿಕಾರಿಗಳು ಸಲಹೆ ನೀಡಿದರು.
  5. ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದಿದ್ದಾರೆ. ಆದರೆ ಇತರ ಮುಂಚೂಣಿಯ ಸಿಬ್ಬಂದಿಯಲ್ಲಿ ಶೇ. 58 ರಷ್ಟು ಮಾತ್ರ ಲಸಿಕೆ ಪಡೆದಿದ್ದಾರೆ. ದೊಡ್ಡ ಅಪಾರ್ಟ್ ಮೆಂಟ್ ಗಳಲ್ಲಿ ಲಸಿಕೆ ಹಾಕಲು ಕ್ರಮ ವಹಿಸುವಂತೆ ಸೂಚಿಸಿದರು.
  6. ಮತದಾರರ ಪಟ್ಟಿಯನ್ನು ಆಧರಿಸಿ, ಹಿರಿಯ ನಾಗರಿಕರನ್ನು ಗುರುತಿಸಿ, ಲಸಿಕೆ ಹಾಕುವುದು.
  7. ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಲಸಿಕೆ ಕೊಡಿಸಲು ಕ್ರಮ ವಹಿಸುವುದು.
  8. ಕೋವಿಡ್ ನಿಯಂತ್ರಣಕ್ಕಾಗಿ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಕೈಗೊಳ್ಳುವ ಮುನ್ನೆಚ್ಚರಿಕೆಯ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಮಾಡಿರುವ ಸಲಹೆಗಳು ಹೀಗಿವೆ:

a. ಮಾಸ್ಕ್ ಧಾರಣೆ , ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಉಲ್ಲಂಘನೆಗೆ ಕಟ್ಟುನಿಟ್ಟಾಗಿ ದಂಡ ವಿಧಿಸುವುದು.

b. ಮದುವೆ ಮತ್ತಿತರ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಮಾರ್ಗಸೂಚಿಯಂತೆ ಕಟ್ಟುನಿಟ್ಟಾಗಿ ನಿಯಂತ್ರಿಸುವುದು.

c. ಪರೀಕ್ಷೆಯ ಪ್ರಮಾಣ ಹೆಚ್ಚಿಸುವುದು, ವಿಶೇಷವಾಗಿ ರೋಗ ಲಕ್ಷಣ ಇರುವವರು, ಅಂಗಡಿ ಮಾಲೀಕರು, ಬಸ್ ನಿರ್ವಾಹಕರು ಮತ್ತಿತರರಿಗೆ ಪರೀಕ್ಷೆ ನಡೆಸುವುದು.

d. ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯವನ್ನು ಚುರುಕುಗೊಳಿಸುವುದು.

e. ಕೋವಿಡ್ ಆಸ್ಪತ್ರೆಗಳು, ಆಕ್ಸಿಜನ್ ಪೂರೈಕೆ ಇರುವ ಹಾಸಿಗೆಗಳು, ಐಸಿಯು ಲಭ್ಯತೆ ಹಾಗೂ ಕೋವಿಡ್ ಕೇರ್ ಸೆಂಟರುಗಳ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳುವುದು.

f. ಖಾಸಗಿ ಆಸ್ಪತ್ರೆಗಳೊಂದಿಗೆ ಮಾತುಕತೆ ನಡೆಸಿ, ಹಿಂದಿನಂತೆ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವುದು.

g. ಹಿರಿಯ ನಾಗರಿಕರಿಗೆ ಲಸಿಕೆ ಹಾಕುವ ಕಾರ್ಯವನ್ನು ಚುರುಕುಗೊಳಿಸುವುದು. ವಿಶೇಷವಾಗಿ ಗ್ರಾಮೀಣ ಪ್ರದೇಶ ಹಾಗೂ ಕೊಳೆಗೇರಿಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವುದು. ಎಲ್ಲ ಇಲಾಖೆಗಳು ಹಾಗೂ ರೋಟರಿ, ಲಯನ್ಸ್ ಕ್ಲಬ್ ಗಳಂತಹ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕ್ರಮ ಕೈಗೊಳ್ಳುವುದು.

h. ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ನಿಗದಿತ ಸಂಖ್ಯೆ ಮೀರಿ ಪ್ರಯಾಣಿಕರನನ್ನು ಕರೆದೊಯ್ಯದಿರುವುದು.

i. ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾದ ಡಾ. ಸಿ.ಎನ್. ಮಂಜುನಾಥ್, ಡಾ. ಸುದರ್ಶನ್, ಡಾ. ರವಿ, ಪ್ರೊ. ಗಿರಿಧರಬಾಬು, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಮೊದಲಾದವರು ತಮ್ಮ ಅಭಿಪ್ರಾಯ ಮಂಡಿಸಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here