ಬೆಂಗಳೂರು:
ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.