ಜೂನ್ 3ರ ಪ್ರಮಾಣ ವಚನದ ಬಳಿಕ ಕಾಂಗ್ರೆಸ್ ಭವನ ಭೂಮಿಪೂಜೆ ಸಾಧ್ಯತೆ: ಡಿ.ಕೆ. ಶಿವಕುಮಾರ್
ಬೆಂಗಳೂರು, ಮೇ 31 : ಜೂನ್ 3ರಂದು ನಡೆಯಲಿರುವ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ರೇಸ್ ಕೋರ್ಸ್ ರಸ್ತೆ ಸಮೀಪ ನಿರ್ಮಾಣಗೊಳ್ಳಲಿರುವ ಕಾಂಗ್ರೆಸ್ ಭವನದ ಭೂಮಿಪೂಜೆ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿ ಪಟ್ಟಕ್ಕೆ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಭಾನುವಾರ ರೇಸ್ ಕೋರ್ಸ್ ರಸ್ತೆ ಸಮೀಪ ಉದ್ದೇಶಿತ ಕಾಂಗ್ರೆಸ್ ಭವನ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವೇಳಾಪಟ್ಟಿ ಇನ್ನಷ್ಟೇ ಅಂತಿಮಗೊಳ್ಳಬೇಕಿದ್ದು, ಅದರ ನಂತರ ಭೂಮಿಪೂಜೆ ಕಾರ್ಯಕ್ರಮದ ದಿನಾಂಕ ಮತ್ತು ಸಮಯ ನಿಗದಿಯಾಗಲಿದೆ ಎಂದು ಹೇಳಿದರು.
“ಜೂನ್ 3ರಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ನಂತರ ಕಾಂಗ್ರೆಸ್ ಭವನದ ಭೂಮಿಪೂಜೆ ನಡೆಸುವ ಬಗ್ಗೆ ಚರ್ಚೆ ನಡೆದಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಸಮಯ ನಿಗದಿಯಾದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಪಕ್ಷದ ಎಲ್ಲಾ ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಸಂಸದರು ಹಾಗೂ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಆಹ್ವಾನ ನೀಡಲಾಗುವುದು ಎಂದು ಹೇಳಿದರು.
ಸ್ಥಳದ ಕೊರತೆಯಿಂದಾಗಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ ಶಿವಕುಮಾರ್, “ಕಾರ್ಯಕರ್ತರು ಇದನ್ನು ಮನಗಾಣಬೇಕು. ಸ್ಥಳ ಸೀಮಿತವಾಗಿರುವುದರಿಂದ ಆಹ್ವಾನಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು” ಎಂದರು.
ರಾಹುಲ್ ಗಾಂಧಿ ಅವರಿಗೆ ಇನ್ನಷ್ಟೇ ಅಧಿಕೃತ ಆಹ್ವಾನ ನೀಡಬೇಕಿದ್ದು, ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮದ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕರ್ತರಿಗಾಗಿ ಎಲ್ಇಡಿ ಪರದೆ ವ್ಯವಸ್ಥೆ
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಕ್ಷದ ಎಲ್ಲಾ ನಾಯಕರು ಹಾಗೂ ಪದಾಧಿಕಾರಿಗಳಿಗೆ ಆಹ್ವಾನ ನೀಡಲು ಸಾಧ್ಯವಾಗದ ಹಿನ್ನೆಲೆ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರಿಗಾಗಿ ಎಲ್ಇಡಿ ಪರದೆಗಳ ಮೂಲಕ ಕಾರ್ಯಕ್ರಮ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.
“ಪಕ್ಷಕ್ಕಾಗಿ ಹೋರಾಟ ನಡೆಸಿ, ದುಡಿದ ನಾಯಕರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದೆ” ಎಂದು ಹೇಳಿದರು.
ರಾಜ್ಯಾದ್ಯಂತ 100 ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಆ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಲೋಕಭವನದಲ್ಲಿ ಪ್ರಮಾಣ ವಚನ
ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ವಿಧಾನಸೌಧದ ಮೆಟ್ಟಿಲುಗಳ ಬದಲು ಲೋಕಭವನದಲ್ಲಿ ನಡೆಸುವ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಬೆಂಗಳೂರಿನ ನಾಗರಿಕರಿಗೆ ಸಂಚಾರ ದಟ್ಟಣೆ ಹಾಗೂ ಇತರೆ ತೊಂದರೆಗಳು ಉಂಟಾಗಬಾರದು ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
“ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಆಗಮಿಸಿದರೆ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯಕ್ರಮವನ್ನು ಲೋಕಭವನದಲ್ಲಿ ಆಯೋಜಿಸಲಾಗಿದೆ” ಎಂದು ಹೇಳಿದರು.
ಕಾರ್ಯಕ್ರಮವನ್ನು ಸರಳವಾಗಿ ನಡೆಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯ ಜನರನ್ನು ಸೇರಿಸಿಕೊಳ್ಳಲು ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಚಿವರ ಪ್ರಮಾಣ ವಚನ ಕುರಿತು ಹೈಕಮಾಂಡ್ ತೀರ್ಮಾನ
ತಮ್ಮೊಂದಿಗೆ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸುವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, “ಆ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಈ ಹಂತದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಹೇಳಿದರು.
