ಬೆಂಗಳೂರು:
ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆಯ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯನನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಮನಹಳ್ಳಿಯ ಶನಿ ಮಹಾತ್ಮ ದೇವಸ್ಥಾನದ ಬಳಿ ಆರೋಪಿಗಳು ಪೊಲೀಸರಿಗೆ ಸಿಕ್ಕಿದ್ದಾರೆ. ನಿನ್ನೆ ಬೆಳಗ್ಗೆ ಹತ್ಯೆ ನಡೆದಿದ್ದು ಕೇವಲ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವ ಮೂಲಕ ಪೊಲೀಸರು ತಮ್ಮ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.
ಪಶ್ಚಿಮ ವಿಭಾಗದ ಪೊಲೀಸರು, ಸಂಚಿನಲ್ಲಿ ಭಾಗಿಯಾಗಿದ್ದರು ಎನ್ನಲಾದ ನಾಲ್ವರನ್ನು ವಶಕ್ಕೆ ಪಡೆದಿದ್ದರು. ಅವರು ನೀಡಿದ್ದ ಮಾಹಿತಿ ಆಧರಿಸಿ ಪ್ರಮುಖ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದರು.
ಫ್ಲವರ್ ಗಾರ್ಡನ್‌ನಲ್ಲಿರುವ ಕಚೇರಿ ಎದುರೇ ಗುರು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿದ್ದರು. ತನಿಖೆಗೆ ಪೊಲೀಸರ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು.
ಇದನ್ನು ಓದು: ಬೆಂಗಳೂರಿನಲ್ಲಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ https://kannada.thebengalurulive.com/bjps-former-corporator-rekha-kadiresh-murdered-in-bengaluru/
ಅದರಂತೆ ಕಾಟನ್ ಪೇಟೆ ಹಾಗೂ ಉಪ್ಪಾರಪೇಟೆ ಇನ್‌ಸ್ಪೆಕ್ಟರ್ ನೇತೃತ್ವದ ತಂಡ, ಪೀಟರ್ ಹಾಗೂ ಸೂರ್ಯ ಬಂಧಿಸಲು ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಗೆ ಹೋಗಿತ್ತು.
ಪಿಎಸ್ಐ, ಕಾನ್‌ಸ್ಟೆಬಲ್ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್, ಇಬ್ಬರ ಮೇಲೂ ಗುಂಡು ಹಾರಿಸಿದ್ದಾರೆ.
ಆರೋಪಿಗಳಿಗೆ ಆರಂಭದಲ್ಲಿ ಪೊಲೀಸರು ಶರಣಾಗುವಂತೆ ಹೇಳಿದರೂ ಕೇಳಲಿಲ್ಲ. ಪೊಲೀಸರ ಮೇಲೆ ದಾಳಿಗೆ ಮುಂದಾದರು, ಆಗ ಅನಿವಾರ್ಯವಾಗಿ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದರು. ಇನ್ಸ್ ಪೆಕ್ಟರ್ ಗಳಾದ ಶಿವಾನಂದ್ ಮತ್ತು ಚಿದಾನಂದ್ ರವರು ಫೈರಿಂಗ್ ಮಾಡಿ ಬಂಧಿಸಿದ್ದಾರೆ.
ನಿನ್ನೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಪಿಗಳನ್ನು 24 ಗಂಟೆಗಳಲ್ಲಿಯೇ ಬಂಧಿಸಲಾಗುವುದು ಎಂದು ಹೇಳಿದ್ದರು. ಗೃಹ ಸಚಿವರು ಕೂಡ ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು. ಇದೀಗ ಪೊಲೀಸರು ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.