ಬೆಂಗಳೂರು: ನಗರ ಹೊರವಲಯದ ನೆಲಮಂಗಲ ಹೆದ್ದಾರಿಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿಂದಾಲ್ ಮೇಲ್ಸೇತುವೆ ಬಳಿ ಶನಿವಾರ ರಾತ್ರಿ ಸುಮಾರು 11.30ರ ವೇಳೆಗೆ ಈ ಘಟನೆ ನಡೆದಿದೆ.
ತುಮಕೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ಅತಿವೇಗದಿಂದ ಚಲಿಸುತ್ತಿದ್ದ ವೇಳೆ ಡಿವೈಡರ್ ಜಂಪ್ ಮಾಡಿ, ಎದುರು ದಿಕ್ಕಿನಲ್ಲಿ ಬರುತ್ತಿದ್ದ KSRTC ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸುತ್ತದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಬಸ್ ಮುಂಭಾಗಕ್ಕೂ ಹಾನಿಯಾಗಿದೆ. ಕಾರಿನಲ್ಲಿದ್ದ ಐವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಲ್ಲಿ ದೊಡ್ಡಬಳ್ಳಾಪುರ ಮೂಲದ ಹರ್ಷಿತ್ ಮತ್ತು ನಿಖಿತ್ ಸೇರಿದ್ದಾರೆ. ಇನ್ನೂ ಮೂವರ ಗುರುತು ಅಧಿಕೃತವಾಗಿ ದೃಢಪಟ್ಟಿಲ್ಲ.
ಹರ್ಷಿತ್ ರಾಜನಕುಂಟೆಯ ಸಾಯಿ ವಿದ್ಯಾ ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತನು ಕೂಡ ಮೃತಪಟ್ಟಿದ್ದಾನೆ.
ಅದೃಷ್ಟವಶಾತ್ KSRTC ಬಸ್ನಲ್ಲಿ ಪ್ರಯಾಣಿಸುತ್ತಿದ್ದ 42 ಮಂದಿ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ ಅತಿವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಐವರು ಸ್ನೇಹಿತರು ಔಟಿಂಗ್ಗೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
