ಬೆಂಗಳೂರು : ‘ಬಿಜೆಪಿ ಒಂದೇ ತಂಡವಾಗಿ ಸರಕಾರದ ವಿರುದ್ಧ ಹೋರಾಡಲಿದೆ. ಬಿಜೆಪಿಯ ಎಲ್ಲ ನಾಯಕರು ಹಾಗೂ ಮುಖಂಡರೊಂದಿಗೆ ಹೋರಾಟ ಮಾಡುವ ಬಗ್ಗೆ ಚರ್ಚಿಸುತ್ತೇನೆ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಮಾತನಾಡಿದ ಅವರು, ‘ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರಕಾರದ ಅನ್ಯಾಯಗಳ ವಿರುದ್ಧ ತೀವ್ರ ಹೋರಾಟ ಮಾಡಲಾಗುವುದು. ಎಲ್ಲ ಸಮಸ್ಯೆಗಳ ಬಗ್ಗೆ ಸದನದಲ್ಲಿ ಪ್ರಶ್ನಿಸಲಾಗುವುದು. ರಾಜ್ಯದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗಿದ್ದು, ಸಿಎಂ ಸಿದ್ದರಾಮಯ್ಯರಿಂದ ಸರಕಾರ ಪಾಪರ್ ಆಗಿದೆ. ಯಾವುದೇ ಅಭಿವೃದ್ಧಿ ಕೆಲಸ ನಡೆದಿಲ್ಲ ಎಂದು ದೂರಿದರು.
ವಿಪಕ್ಷದಲ್ಲಿ ಕಾಂಗ್ರೆಸ್ ಇದ್ದಾಗ ಕೋವಿಡ್ ಹಗರಣ ಇರುವ ಬಗ್ಗೆ ಮಾತನಾಡಲಿಲ್ಲ. ಈಗ ಮಾತ್ರ ಆ ಬಗ್ಗೆ ಮಾತನಾಡುತ್ತಿದೆ. ನಮ್ಮ ಅವಧಿ ಹಾಗೂ ಈಗಿನ 16 ತಿಂಗಳ ಅವಧಿಯ ಆಡಳಿತದ ಎಲ್ಲವನ್ನೂ ಸಿಬಿಐಗೆ ವಹಿಸಲಿ. ನಾವು ತನಿಖೆಗೆ ತಯಾರಿದ್ದೇವೆ ಎಂದ ಅವರು, ಕಾಂಗ್ರೆಸ್ ನಾಯಕರಂತೆಯೇ ಇವಿಎಂ ಮೇಲೆ ನಮಗೂ ಅನುಮಾನವಿದೆ. ಆದುದರಿಂದ ಕಾಂಗ್ರೆಸ್‍ನ ಎಲ್ಲ ಶಾಸಕರು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಈ ಬಾರಿ ಎರಡು ವಾರ ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಕೇಳಲಾಗುವುದು. ವಕ್ಫ್ ಆಸ್ತಿ ಕಬಳಿಕೆ ಜ್ವಲಂತ ಸಮಸ್ಯೆಯಾಗಿದೆ. ರೇಷನ್ ಕಾರ್ಡ್ ರದ್ದು ಮಾಡಿ ಗ್ಯಾರಂಟಿಗಾಗಿ ಹಣ ಉಳಿಸಲಾಗುತ್ತಿದೆ. ಈ ಸಮಸ್ಯೆಯ ವಿರುದ್ಧ ಅಧಿವೇಶನದಲ್ಲಿ ಹೋರಾಟ ಮಾಡಲಾಗುವುದು ಎಂದರು.