ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್.
ಬೆಂಗಳೂರು: ಬಸವಣ್ಣನವರನ್ನು ಅವಮಾನಿಸಿದೆ ಎನ್ನಲಾದ ವಿವಾದಿತ ಕೃತಿ ಬಸವಮಂಟಪ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಲೇಖಕ ರವಿ ಹಂಜ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ತಿಳಿಸಿದ್ದಾರೆ. ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ ಮಾಡಿದ ಪೋಸ್ಟ್‌ನಲ್ಲಿ, ಕೃತಿಯಲ್ಲಿ ಬಸವಣ್ಣನವರ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿ ನಿಂದಿಸಿರುವುದು ಖಂಡನೀಯ ಎಂದು ಹೇಳಿದ ಶಿವಕುಮಾರ್, ಮಹಾನ್ ಸಮಾಜ ಸುಧಾರಕರಿಗೆ ಮಾಡಿರುವ ಈ ಅವಮಾನವನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದಿದ್ದಾರೆ.

ನಾಡಿನ ಮಹನೀಯರ ಬಗ್ಗೆ ಹಗುರವಾಗಿ ಬರೆಯುವ ಮತ್ತು ಸಮಾಜದ ಶಾಂತಿ ಕದಡುವ ಕಿಡಿಗೇಡಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಸರ್ಕಾರ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ, ಬಸವಣ್ಣನವರ ತತ್ವಗಳಿಗೆ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ನಿರ್ದಾಕ್ಷಿಣ್ಯವಾಗಿ ಮಟ್ಟಹಾಕಲಾಗುವುದು ಎಂದು ಅವರು ಹೇಳಿದ್ದಾರೆ.
ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಹಾಗೂ ಎಲ್ಲರ ಅಸ್ಮಿತೆ ಎಂದು ಬಣ್ಣಿಸಿದ ಮುಖ್ಯಮಂತ್ರಿ, ಜಗತ್ತಿಗೆ ಅನುಭವ ಮಂಟಪದ ಮೂಲಕ ಸಂಸತ್ತಿನ ಪರಿಕಲ್ಪನೆ ನೀಡಿದ ಅವರು ಸಮಾನತೆ, ಕಾಯಕ, ದಾಸೋಹ, ಮಾನವೀಯತೆ, ಸಾಮಾಜಿಕ ನ್ಯಾಯ ಹಾಗೂ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಪ್ರತಿಪಾದಿಸಿದರು, ಸರ್ಕಾರವೂ ಅದೇ ತತ್ವಗಳಡಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ ಗೃಹ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಪುಟ ನಿರ್ಧರಿಸಿದೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದರು. ಹಿಂದಿನ ವರದಿಯನ್ನು ಓದಿ. ಎಫ್‌ಐಆರ್‌ನ ಪೊಲೀಸ್ ಠಾಣೆ ಅಥವಾ ಸೆಕ್ಷನ್‌ಗಳ ವಿವರಗಳನ್ನು ಮುಖ್ಯಮಂತ್ರಿಗಳ ಪೋಸ್ಟ್‌ನಲ್ಲಿ ನೀಡಿಲ್ಲ.
