ಮಂಡ್ಯ, 16 ಮಾರ್ಚ್: ಮಂಡ್ಯ ಜಿಲ್ಲೆಯಲ್ಲಿ ಸ್ಥಾಪನೆಯಾಗಲಿರುವ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರಕ್ಕೆ ರಾಜ್ಯ ಸರ್ಕಾರದಿಂದ ನೀಡಲಾಗುವ ಭೂಮಿಯನ್ನು ARAI ಅಧಿಕಾರಿಗಳು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ARAI ಸಂಸ್ಥೆಯ ಹಿರಿಯ ಉಪ ನಿರ್ದೇಶಕರಾದ ವಿ.ಎ. ಪಂಖಾವಾಲ, ಡಾ. ಬಿ.ವಿ. ಶ್ಯಾಮಸುಂದರ ಮತ್ತು ಹಿರಿಯ ಪ್ರಧಾನ ವ್ಯವಸ್ಥಾಪಕ ಗಿರೀಶ್ ತನವಾಡೆ ಅವರು ಮಂಡ್ಯದ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಬಸರಾಳು ಸಮೀಪದ ಮದ್ದಿಘಟ್ಟ ಮತ್ತು ಹೆಗ್ಗಡತಿಹಳ್ಳಿ ಗ್ರಾಮಗಳ ಬಳಿಯ ಜಾಗವನ್ನು ವೀಕ್ಷಿಸಿದರು.
ಈ ಎರಡು ಗ್ರಾಮಗಳ ಬಳಿ ಸುಮಾರು 110 ಎಕರೆ ಸರಕಾರಿ ಭೂಮಿ ಲಭ್ಯವಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ARAI ತಂಡವು ಈ ಭೂಮಿಯನ್ನು ವಿಸ್ತೃತವಾಗಿ ಪರಿಶೀಲನೆ ನಡೆಸಿದ್ದು, ಜಾಗಕ್ಕೆ ಸಂಬಂಧಿತ ಅಗತ್ಯ ಮಾಹಿತಿಯನ್ನು ಕಂದಾಯ ಇಲಾಖೆ ಅಧಿಕಾರಿಗಳಿಂದ ಕಲೆ ಹಾಕಿತು.
ಭೂಮಿಯ ಸ್ವರೂಪ, ರಸ್ತೆ ಸಂಪರ್ಕ, ನೀರು, ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳ ಸಂಯೋಜನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ARAI ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ, ತಾಂತ್ರಿಕ ತಂಡವು 20 ದಿನಗಳಲ್ಲಿ ವರದಿ ನೀಡಲಿದೆ ಎಂದು ತಿಳಿಸಲಾಗಿದೆ.
ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ARAI ಪರೀಕ್ಷಾ ಕೇಂದ್ರ ಸ್ಥಾಪನೆಯ ಪ್ರಕ್ರಿಯೆಗಳು ಆರಂಭವಾಗಿವೆ ಎಂದು ಮಂಡ್ಯದ ಜನತೆಗೆ ಭರವಸೆ ನೀಡಿದ್ದಾರೆ. ಈ ಯೋಜನೆಗೆ ಆರಂಭಿಕ ಹಂತದಲ್ಲಿ ₹ 500 ಕೋಟಿ ಹೂಡಿಕೆ ಮಾಡಲಾಗುವುದು. ಇದರಿಂದ ಮಂಡ್ಯದ ಅಭಿವೃದ್ಧಿಗೆ ಮತ್ತು ಕರ್ನಾಟಕದಲ್ಲಿ ಆಟೋಮೊಬೈಲ್ ಕ್ಷೇತ್ರದ ಬೆಳವಣಿಗೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.
