ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ
ಬೆಂಗಳೂರು:
ಯಾವುದೇ ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಲು ಪುರುಷರಷ್ಟೇ ಮಹಿಳೆಯರೂ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಶಕ್ತಿ ಯೋಜನೆ ಮಹಿಳೆಯರಿಗಾಗಿ ಮಾಡಿರುವ ಕಾರ್ಯಕ್ರಮ. ಸಮಾಜದಲ್ಲಿ ಅರ್ಧದಷ್ಟಿರುವ ಮಹಿಳೆಯರು ಶತಮಾನಗಳಿಂದ ಶೋಷಣೆಗೆ ಒಳಗಾಗಿದ್ದಾರೆ. ಅಲ್ಪಸಂಖ್ಯಾತರು, ಮಹಿಳೆಯರು, ಅವಕಾಶಗಳಿಂದ ಹಾಗೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಎಂದರು.
ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ @siddaramaiah ಅವರು ಇಂದು ಚಾಲನೆ ನೀಡಿದರು.
— CM of Karnataka (@CMofKarnataka) June 11, 2023
ಉಪ ಮುಖ್ಯಮಂತ್ರಿ @DKShivakumar, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ @thekjgeorge, @krishnabgowda, ಮಧು… pic.twitter.com/f1SDJzdRkr
ಅನೇಕ ಮುಂದುವರೆದ ದೇಶಗಳಲ್ಲಿ ಮಹಿಳೆಯರ ಪಾಳ್ಗೊಳ್ಳುವಿಕೆ ಪ್ರಮಾಣವನ್ನು ತಿಳಿಸಿದ ಮುಖ್ಯಮಂತ್ರಿಗಳು, ಅಮೆರಿಕಾದಲ್ಲಿ ಶೇ 53% ರಷ್ಟು, ಚೈನಾ ದಲ್ಲಿ ಶೇ 54 ರಷ್ಟು, ಆಸ್ಟ್ರೀಲಿಯಾದಲ್ಲಿ ಶೇ 57, ಇಂಡೋನೇಶಿಯಾದಲ್ಲಿ ಶೇ 57 ರಷ್ಟು ಪಾಲ್ಗೊಳ್ಳುತ್ತಾರೆ. ಬಾಂಗ್ಲಾದೇಶದಲ್ಲಿ ಶೇ 30 ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ. ದೇಶದಲ್ಲಿ 2014 ರ ನಂತರ ಶೇ 30 ರಷ್ಟಿದ್ದ ಪ್ರಮಾಣ ಶೇ 24 ಕ್ಕೆ ಇಳಿದಿದೆ ಎಂದರು. ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ.
ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ಎಲ್ಲಾ ಜಾತಿ, ಧರ್ಮದ ಬಡವರಿಗೆ ಆರ್ಥಿಕ, ಸಮಾಜಿಕವಾದ ಶಕ್ತಿ ತುಂಬುವ ಕೆಲಸ
ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬರುತ್ತಿದೆ. ಎಲ್ಲಾ ಜಾತಿ ಮತ್ತು ಧರ್ಮದ ಬಡವರಿಗೆ ಆರ್ಥಿಕ, ಸಮಾಜಿಕವಾದ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮಗೆ ಯಾವುದೇ ಜಾತಿ ಧರ್ಮ ಇಲ್ಲ. ನಾವು ಹಿಂದೆ ನುಡಿದಂತೆ ನಡೆದಿದ್ದೇವೆ. ಹಿಂದಿನ ಬಾರಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದಿದ್ದೇವೆ.
ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸಾಧ್ಯವಿಲ್ಲ. ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. 59000 ಕೋಟಿ ರೂ.ಗಳ ಅಗತ್ಯವಿದೆ. ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎನ್ನುವುದು ಮುಖ್ಯವಲ್ಲ. ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ ಎಂದರು.
ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು
10 ಕೆಜಿ ಆಹಾರಧಾನ್ಯವನ್ನು ಅಂತ್ಯೋದಯ ಕಾರ್ಡುದಾರರಿಗೆ ನೀಡುವ ಭರವಸೆ ನೀಡಿದ್ದೇವೆ. ಇದಕ್ಕೆ 10100 ಕೋಟಿ ರೂ.ಗಳ ಅಗತ್ಯವಿದೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹಸಿವಿನ ಕಷ್ಟ ಊಟವಿಲ್ಲದವರಿಗೆ ತಿಳಿಯುತ್ತದೆ. ಹೊಟ್ಟೆ ತುಂಬಿ ಅಜೀರ್ಣ ಮಾಡಿಕೊಂಡವರಿಗೆ ತಿಳಿದಿರುವುದಿಲ್ಲ ಎಂದರು.
ಯೋಜನೆಯ ಲಾಭ ಪಡೆಯಬೇಕು
ಹೆಣ್ಣುಮಕ್ಕಳು ಇಂದು ಒಂದು ಗಂಟೆಯಿಂದ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು. ಈ ಯೋಜನೆ ವಿದ್ಯಾರ್ಥಿನಿಯರಿಗೂ ಅನ್ವಯವಾಗುತ್ತದೆ ಎಂದರಲ್ಲದೆ ಈ ಯೋಜನೆಗಳಲ್ಲಿ ಯಾರೂ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳಿಗೆ ತಲುಪುತ್ತದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ಇದೇ ವೇಳೆ ಗುಲಾಬಿ ಬಣ್ಣದ ಸ್ಮಾರ್ಟ್, ಶಕ್ತಿ ಯೋಜನೆಯ ಲಾಂಛನವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು