ಮಂಗಳೂರು:
ದಕ್ಷಿಣ ಕನ್ನಡದಲ್ಲಿ ರಾಜಕೀಯ ಪ್ರೇರಿತ ಕೋಮು ಹತ್ಯೆ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಶುಕ್ರವಾರ ಒತ್ತಾಯಿಸಿದ್ದಾರೆ.
ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಹತ್ಯೆಗಳಲ್ಲಿ ಶರತ್ ಮಡಿವಾಳ, ಪ್ರವೀಣ್ ನೆಟ್ಟಾರು, ಅಶ್ರಫ್, ಜಲೀಲ್, ಮಸೂದ್ ಅವರಂತಹ ಅಮಾಯಕ ಹಿಂದೂ ಮತ್ತು ಮುಸ್ಲಿಂ ಯುವಕರು ಪ್ರಾಣ ಕಳೆದುಕೊಂಡಿದ್ದಾರೆಂದು ಹೇಳಿದರು.
“ಈ ಹತ್ಯೆಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು. ಹೊಸದಾಗಿ ರಚನೆಯಾಗಿರುವ ರಾಜ್ಯ ಸರ್ಕಾರಕ್ಕೆ ಶೀಘ್ರವೇ ಈ ಕುರಿತು ಮನವಿ ಸಲ್ಲಿಸಲಾಗುವುದು. ಈ ಹತ್ಯೆಯ ಹಿಂದೆ ಯಾರ ಕೈವಾಡವಿದೆ ಎಂಬುದು ತನಿಖೆಯಿಂದ ಬೆಳಕಿಗೆ ಬರಬೇಕಿದೆ. ಬಿಜೆಪಿ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಭಾಗಿಯಾಗಿರಬಹುದು, ಆದರೆ ಒಬ್ಬ ಕಾಂಗ್ರೆಸ್ ಕಾರ್ಯಕರ್ತನನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ. ಜನರು ಸತ್ಯವನ್ನು ತಿಳಿದುಕೊಳ್ಳಲು ಅರ್ಹರಾಗಿದ್ದಾರೆಂದು ತಿಳಿಸಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಅವರು 24 ಹಿಂದುತ್ವವಾದಿಗಳನ್ನು ಕೊಂದಿದ್ದಾರೆ ಎಂಬ ಬಿಜೆಪಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿವಾದಾತ್ಮಕ ಹೇಳಿಕೆಗೆ ರಮಾನಾಥ್ ರೈ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಪೂಂಜಾ ವಿರುದ್ಧ ಕಾಂಗ್ರೆಸ್ ಮಾನನಷ್ಟ ಮೊಕದ್ದಮೆ ಹೂಡಲಿದೆ. ಅವರ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಮೇ 22ರಂದು ನಡೆದ ವಿಜಯೋತ್ಸವದ ವೇಳೆ ಸಿದ್ದರಾಮಯ್ಯನವರ ಕುರಿತು ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆದ ನಂತರ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಪೂಂಜಾ ಮತ್ತು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ವಿರುದ್ಧದ ಎಫ್‌ಐಆರ್‌ಗಳು ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವ ವಿಧಾನವಾಗಿದೆ, ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಹೇಳಿದರು.