ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಶನಿವಾರ ದೀರ್ಘಕಾಲದ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ವಯೋಸಹಜ ಆರೋಗ್ಯ ಸಮಸ್ಯೆಗಳು ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನು ನಾಲ್ಕು ದಿನಗಳ ಹಿಂದೆ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು.
ಆರಂಭದಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸಿದ್ದರೂ ನಂತರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದ್ದು, ಸಂಜೆ ಸುಮಾರು 4.40 ಗಂಟೆಗೆ ಹೃದಯಾಘಾತ ಸಂಭವಿಸಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಸ್ಪತ್ರೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.