ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಜೆಡಿಎಸ್ ಸೇರ್ಪಡೆ
ಬೆಂಗಳೂರು, ಮೇ 24: ಸುದ್ದಿ ವಾಹಿನಿಯ ಮಾಜಿ ನಿರೂಪಕಿ, ನಟಿ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ಜಾಹ್ನವಿ ಅವರು ಶನಿವಾರ ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವದ ಮೇಲೆ ವಿಶ್ವಾಸ ಇಟ್ಟು ಪಕ್ಷ ಸೇರುತ್ತಿರುವುದಾಗಿ ಜಾಹ್ನವಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಪಕ್ಷದ ಬಾವುಟ ನೀಡುವ ಮೂಲಕ ಜಾಹ್ನವಿ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ರಾಜ್ಯದಲ್ಲಿ ಮುಂದಿನ ರಾಜಕೀಯ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು ಯುವಕರು ಹಾಗೂ ಮಹಿಳೆಯರ ನಡುವೆ ಪಕ್ಷದ ಪ್ರಭಾವ ಹೆಚ್ಚಿಸಲು ಜೆಡಿಎಸ್ ಕೈಗೊಂಡಿರುವ ಪ್ರಯತ್ನದ ಭಾಗವಾಗಿ ಈ ಸೇರ್ಪಡೆಯನ್ನು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
