ಬೆಂಗಳೂರು: ನಗರದ ಗಾಯತ್ರಿ ನಗರದಲ್ಲಿ ನಾಲ್ಕು ಅಂತಸ್ತಿನ ನಿವಾಸಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 53 ವರ್ಷದ ಮಹಿಳೆ ಸಜೀವ ದಹನಗೊಂಡ ಘಟನೆ ಸೋಮವಾರ ನಡೆದಿದೆ.
ಮೃತರನ್ನು ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ ಪತ್ನಿ ಸವಿತಾ ಎಂದು ಗುರುತಿಸಲಾಗಿದೆ. ರಮೇಶ್ ಬಾಬು ಅವರ ನಾಲ್ಕಂತಸ್ತಿನ ಮನೆಯಲ್ಲಿ ಮೂರನೇ ಮಹಡಿಯ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಈ ವೇಳೆ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು.
ಗಾಯಗೊಂಡಿರುವವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅನಿಲ ಸೋರಿಕೆ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಇತರ ಕಾರಣಗಳಿಂದ ಬೆಂಕಿ ಕಾಣಿಸಿಕೊಂಡಿದೆಯೇ ಎಂಬ ಬಗ್ಗೆ ತಾಂತ್ರಿಕ ತಂಡಗಳು ಪರಿಶೀಲನೆ ನಡೆಸುತ್ತಿವೆ.
ಹೆಚ್ಚಿನ ವಿವರಗಳು ತನಿಖೆಯ ನಂತರ ಹೊರಬೀಳುವ ಸಾಧ್ಯತೆ ಇದೆ.
