ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಲ್ಲೇಶ್ವರ ಕ್ಷೇತ್ರದ ಕಾಮಗಾರಿಗಳ ಪರಿಶೀಲನಾ ಸಭೆ.
ಬೆಂಗಳೂರು: ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಶುಕ್ರವಾರ ಅಧಿಕಾರಿಗಳಿಗೆ ಸೂಚಿಸಿದರು. ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಸಮಸ್ಯೆಗಳು ಹಾಗೂ ಆದ್ಯತಾ ಅಭಿವೃದ್ಧಿ ಕಾಮಗಾರಿಗಳ ಕುರಿತ ಸಮಗ್ರ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಸಭಾಂಗಣದಲ್ಲಿ ಕ್ಷೇತ್ರದ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಪಶ್ಚಿಮ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ರಾವ್ ವಹಿಸಿದ್ದರು. ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿ, ಸ್ವೀಕೃತವಾಗಿರುವ ದೂರುಗಳು, ಬಾಕಿ ಸಮಸ್ಯೆಗಳು ಹಾಗೂ ಆದ್ಯತೆಯ ಮೇರೆಗೆ ಕೈಗೊಳ್ಳಬೇಕಿರುವ ಕಾರ್ಯಗಳ ಕುರಿತು ಚರ್ಚಿಸಲಾಯಿತು. ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು ಎಂದು ಜಿಬಿಎ ಪ್ರಕಟಣೆ ತಿಳಿಸಿದೆ.
ಸೂಚನೆಗಳಲ್ಲಿ, ಮಲ್ಲೇಶ್ವರದ 18ನೇ ಅಡ್ಡರಸ್ತೆಯ ಸ್ಯಾಂಕಿ ಟ್ಯಾಂಕ್ ಪ್ರವೇಶದ್ವಾರದ ಬಳಿ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕಾಗಿ ಸ್ಕೈವಾಕ್ ನಿರ್ಮಾಣದ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸುವಂತೆ ರಾವ್ ಸೂಚಿಸಿದರು. ಶ್ರೀರಾಮಪುರ ಮೆಟ್ರೋ ನಿಲ್ದಾಣದ ಬಳಿ ಹೆಚ್ಚುತ್ತಿರುವ ವಾಹನ ದಟ್ಟಣೆ ಮತ್ತು ಪಾರ್ಕಿಂಗ್ ಸಮಸ್ಯೆಗೆ ಪರಿಹಾರವಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ ಬಹುಮಹಡಿ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆಯೂ ಹೇಳಿದರು. ಕ್ಷೇತ್ರದ ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಖಾತಾ ವರ್ಗಾವಣೆ ಪ್ರಕ್ರಿಯೆಯನ್ನು ಪರಿಶೀಲಿಸಿ ಬಾಕಿ ಹಂತಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಹಾಗೂ ರೈಲ್ವೆ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ರೈಲ್ವೆ ಸಂಬಂಧಿತ ಕಾಮಗಾರಿಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಲು ತಿಳಿಸಲಾಯಿತು.
ಸ್ಯಾಂಕಿ ಬಂಡ್ ರಸ್ತೆ ಕುಸಿತದ ಸಮಸ್ಯೆ ಹಾಗೂ ದಂಡೆ ಸದೃಢಗೊಳಿಸಿ ದುರಸ್ತಿ ಕೈಗೊಳ್ಳುವುದು; ಯಶವಂತಪುರ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಪ್ರಗತಿ ಮತ್ತು ಸುತ್ತಮುತ್ತ ಸಂಚಾರ ದಟ್ಟಣೆ ನಿವಾರಣೆಯ ಕ್ರಮಗಳು; ಸುರಕ್ಷ 75 ಜಂಕ್ಷನ್ ಅಭಿವೃದ್ಧಿ ಉಪಕ್ರಮದಡಿ ಸಂಚಾರ ಸುರಕ್ಷತೆ ಮತ್ತು ವಾಹನಗಳ ಸುಗಮ ಸಂಚಾರದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ನಮ್ಮ ಕ್ಲಿನಿಕ್ ಸೇರಿದಂತೆ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ, ಒಂಟಿಮನೆ ಯೋಜನೆ ಸೇರಿದಂತೆ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವುದು, ತ್ಯಾಜ್ಯ ಸಂಗ್ರಹಣೆ, ವೈಜ್ಞಾನಿಕ ವಿಲೇವಾರಿ ಹಾಗೂ ಸ್ವಚ್ಛತೆ ಕುರಿತೂ ಚರ್ಚೆ ನಡೆಯಿತು.
ಅಪರ ಆಯುಕ್ತೆ ಕವಿತಾ ರಾಜಾರಾಂ, ಉಪ ಆಯುಕ್ತೆ ಸೈಯದಾ ಆಫ್ರೀನ್ ಬಾನು ಎಸ್. ಬಳ್ಳಾರಿ, ಜಂಟಿ ಆಯುಕ್ತರಾದ ಡಾ. ಶೃತಿ ಎಂ.ಕೆ., ಮುಖ್ಯ ಅಭಿಯಂತರರು, ಆರೋಗ್ಯಾಧಿಕಾರಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
