ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್
ಬೆಂಗಳೂರು, ಜುಲೈ 21: ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳ ಮೇಲೆ ನಡೆದ ಹಲ್ಲೆಯ ಬಳಿಕ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಾಜಿನಗರ ಬಸ್ ನಿಲ್ದಾಣ ಸಮೀಪ ಬೆಳಗ್ಗೆ ಸುಮಾರು 10 ಗಂಟೆಗೆ ಆರಂಭವಾದ ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳ ಮೇಲಿನ ಹಲ್ಲೆಯ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬಳಿಕ ಜಿಬಿಎ ಸಿಬ್ಬಂದಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಅಧಿಕಾರಿಗಳು ಎರಡು ಜೆಸಿಬಿ ಯಂತ್ರಗಳೊಂದಿಗೆ ಕಾರ್ಯಾಚರಣೆಯನ್ನು ಮರುಪ್ರಾರಂಭಿಸಿ ಉಳಿದಿದ್ದ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಿದರು.
ಕೆಲವು ವ್ಯಾಪಾರಿಗಳಿಗೆ ತಮ್ಮ ಸಾಮಗ್ರಿಗಳನ್ನು ತೆರವುಗೊಳಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಉಳಿದ ವಸ್ತುಗಳು ಮತ್ತು ಅವಶೇಷಗಳನ್ನು ಟ್ರ್ಯಾಕ್ಟರ್ಗಳ ಮೂಲಕ ತೆರವುಗೊಳಿಸಲಾಯಿತು.
ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಕಾರ್ಯಾಚರಣೆಯ ನೇತೃತ್ವ ವಹಿಸಿ ತೆರವು ಕಾರ್ಯವನ್ನು ಪೂರ್ಣಗೊಳಿಸಿದರು. ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 10ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮರುಪ್ರಾರಂಭಗೊಂಡ ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ಹಲ್ಲೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.