ಜೂನ್ 28ರಿಂದ ನಾಲ್ಕು ದಿನಗಳ ಪಲ್ಸ್ ಪೋಲಿಯೋ ಅಭಿಯಾನ; 11.34 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಜಿಬಿಎ ಗುರಿ
ಬೆಂಗಳೂರು, ಮೇ 22: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಐದು ವರ್ಷದೊಳಗಿನ 11.34 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿಯನ್ನು ನಿಗದಿಪಡಿಸಲಾಗಿದೆ.
ಈ ಸಂಬಂಧ ನಡೆದ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಲಸಿಕಾ ಅಭಿಯಾನಕ್ಕೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿ, ಶೇ.100 ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು. ಜೊತೆಗೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳುವಂತೆ ಹಾಗೂ ಅಪಾರ್ಟ್ಮೆಂಟ್ ಅಸೋಸಿಯೇಷನ್ಗಳು ಮತ್ತು ನಿವಾಸಿ ಸಂಘಟನೆಗಳ ಸಹಕಾರ ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಲಸಿಕೆ ನೀಡುವಂತೆ ಸೂಚಿಸಿದರು.
ಆರೋಗ್ಯ ವಿಭಾಗದ ವಿಶೇಷ ಆಯುಕ್ತ ವೆಂಕಟಾಚಲಪತಿ ಮಾತನಾಡಿ, ನಗರದಲ್ಲಿ ಪಲ್ಸ್ ಪೋಲಿಯೋ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು. ನರ್ಸಿಂಗ್, ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಸ್ವಯಂಸೇವಕರಾಗಿ ಬಳಸಿಕೊಂಡು ಎಲ್ಲ ಅರ್ಹ ಮಕ್ಕಳಿಗೂ ಪೋಲಿಯೋ ಹನಿ ತಲುಪುವಂತೆ ಕಾರ್ಯನಿರ್ವಹಿಸಲು ಸಲಹೆ ನೀಡಿದರು.
ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು, ಮೆಟ್ರೋ ನಿಲ್ದಾಣಗಳು, ಮಾರುಕಟ್ಟೆಗಳು, ಮಾಲ್ಗಳು, ಉದ್ಯಾನವನಗಳು, ಪ್ರವಾಸಿ ತಾಣಗಳು, ಕೊಳಗೇರಿ ಪ್ರದೇಶಗಳು ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರಿ ಲಸಿಕಾ ತಂಡಗಳನ್ನು ನಿಯೋಜಿಸಲು ಸೂಚಿಸಲಾಗಿದೆ. ಕಟ್ಟಡ ನಿರ್ಮಾಣ ಸ್ಥಳಗಳು ಹಾಗೂ ವಲಸಿಗರ ವಸತಿ ಪ್ರದೇಶಗಳಿಗೂ ವಿಶೇಷ ಗಮನ ನೀಡಲಾಗುತ್ತಿದೆ.
ಮುಖ್ಯ ಆರೋಗ್ಯಾಧಿಕಾರಿ ಡಾ. ಎಸ್.ಎಸ್. ಮದನಿ ಮಾತನಾಡಿ, ಜೂನ್ 28ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದಾದ್ಯಂತ ಲಸಿಕಾ ಬೂತ್ಗಳಲ್ಲಿ ಪೋಲಿಯೋ ಹನಿ ನೀಡಲಾಗುವುದು ಎಂದು ತಿಳಿಸಿದರು.
ಜೂನ್ 29ರಿಂದ ಜುಲೈ 1ರವರೆಗೆ ಮನೆ-ಮನೆಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು. ಜೊತೆಗೆ ಜನಸಂದಣಿ ಹೆಚ್ಚಿರುವ ಪ್ರದೇಶಗಳು, ಕೊಳಗೇರಿ ಪ್ರದೇಶಗಳು ಹಾಗೂ ವಲಸಿಗರ ವಸತಿ ಪ್ರದೇಶಗಳಲ್ಲಿ ಸಂಚಾರಿ ತಂಡಗಳ ಮೂಲಕವೂ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ನವಜಾತ ಶಿಶುವಿನಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳೂ ಕಡ್ಡಾಯವಾಗಿ ಎರಡು ಹನಿಗಳ ಪೋಲಿಯೋ ಲಸಿಕೆ ಪಡೆಯಬೇಕು. ಈ ಲಸಿಕೆಯನ್ನು ಕ್ಲಿನಿಕ್ಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಹೆರಿಗೆ ಆಸ್ಪತ್ರೆಗಳು, ರೆಫರಲ್ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಒಟ್ಟು 11,34,988 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ 3,391 ಸ್ಥಿರ ಬೂತ್ಗಳು, 597 ಸಂಚಾರಿ ತಂಡಗಳು ಹಾಗೂ 464 ಮೊಬೈಲ್ ತಂಡಗಳು ಸೇರಿದಂತೆ ಒಟ್ಟು 4,452 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
ಸಭೆಯಲ್ಲಿ ನಗರ ಪಾಲಿಕೆಗಳ ಆಯುಕ್ತರು, ಜಂಟಿ ಆಯುಕ್ತರು, ಆರೋಗ್ಯಾಧಿಕಾರಿಗಳು, ಉಪ ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
